ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

Social Share

ಲಕ್ನೋ, ಅ.10- ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಯಾದವ್(82) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಗುರುಗ್ರಾಮ್‍ನ ಮೇದಾಂತ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಅ.2ರಂದು ದಾಖಲಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಕಳೆದ ಮೂರು ದಿನಗಳ ಹಿಂದೆ ಐಸಿಯು ಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತಿತ್ತು. ತಡ ರಾತ್ರಿ ಅವರ ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೆಂಟಿಲೇಟರ್ ಅಳವಡಿಸಲಾಗಿತ್ತು.

ಇಂದು ಬೆಳಗ್ಗೆ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ವಿರೋದ ಪಕ್ಷದ ನಾಯಕ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವನ್ನು ಕಟ್ಟಿ ಬೆಳೆಸಿ ಉತ್ತುಂಗಕ್ಕೇರಿಸಿದ ಕೀರ್ತಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಸಲ್ಲುತ್ತದೆ.

ಸತತ ಹೋರಾಟದ ಬದುಕಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಹೊಸ ಯುಗವನ್ನೇ ಆರಂಭಿಸಿದ್ದ ಅವರು ಮುಖ್ಯಮಂತ್ರಿಯಾಗಿ, ಕೇಂದ್ರ ಸರ್ಕಾರದಲ್ಲಿ ಗೃಹ ಸಚಿವರಾಗಿ ,ಉತ್ತರ ಭಾರತದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿದ್ದರು.

1980ರ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡು ಮಂಡಲ್ ಕಮಿಷನ್ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡಿದ್ದರು. ಹಿಂದುಳಿದ ವರ್ಗಕ್ಕೆ ಮೀಸಲಾತಿ ಸೇರಿದಂತೆ ಹಲವು ಚಳುವಳಿಗಳಲ್ಲಿ ಇವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಜನರು ಅವರನ್ನು ನೇತಾಜಿ ಎಂದೇ ಕರೆಯುತ್ತಿದ್ದರು.

1996ರಲ್ಲಿ ಲೋಕಸಭೆಗೆ ಸ್ರ್ಪಧಿಸಿ ಗೆದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿ ಕೇಂದ್ರದಲ್ಲಿ ಗೃಹಸಚಿವರಾಗಿ ಕಾರ್ಯನಿರ್ವಹಿಸಿದ್ದರು. 1999ರಲ್ಲಿ ಸರ್ಕಾರ ಪತನದ ನಂತರ ಕಾಂಗ್ರೆಸ್‍ಗೆ ಬೆಂಬಲ ಸೂಚಿಸಿ ಸೋನಿಯಾ ಗಾಂಧಿ ಪರ ನಿಂತಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಗಮನ ಸೆಳೆದಿದ್ದರು. ನಂತರ ಏಳು-ಬೀಳುಗಳನ್ನು ಕಂಡು 2012 ರಲ್ಲಿ ಮತ್ತೆ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ ಅಧಿಕಾರಿದ ಚುಕ್ಕಾಣಿ ಹಿಡಿದ ನಂತರ ಅವರು ತಮ್ಮ ಪುತ್ರ ಅಖಿಲೇಶ್ ಯಾದವ್ ನ ಮುಖ್ಯಮಂತ್ರಿ ಸ್ಥಾನಕ್ಕೆ ತಂದಿದ್ದರು. 2016ರಲ್ಲಿ ಕೌಟುಂಬಿಕ ಕಲಹ ಏರ್ಪಟ್ಟು ಅಖಿಲೇಶ್ ಯಾದವ್‍ರವರನ್ನು ಪಕ್ಷದಿಂದ ಉಚ್ಚಾಟಿಸಿ ಸಂಚಲನ ಸೃಷ್ಟಿಸಿದ್ದರು.

2017ರಲ್ಲಿ ಮತ್ತೆ ಒಂದುಗೂಡಿದರೂ ಸಹ ಬಿಜೆಪಿ ಅಲೆಗೆ ನೆಲೆ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು. ಆದರೂ ಕೂಡ ಕೆಚ್ಚೆದೆಯಿಂದ ವಿರೋಧ ಪಕ್ಷದಲ್ಲೇ ಗುರುತಿಸಿಕೊಂಡು ಕೇಂದ್ರದ ವಿರುದ್ಧ ಗುಡುಗಿದರು.
ಕಳೆದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ಗೆ ಸೂರ್ತಿ ತುಂಬಿ ಭರ್ಜರಿ ಪ್ರಚಾರ ನಡೆಸಿದ್ದರು. ಪಕ್ಷ ಗಮನಾರ್ಹ ಸಾಧನೆ ಮಾಡಿದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿತ್ತು. ಇತ್ತೀಚೆಗೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಮುಲಾಯಂ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅಂತ್ಯಕ್ರಿಯೆ: ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಸರ್ಕಾರಿ ಗೌರವಗಳೊಂದಿಗೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

Articles You Might Like

Share This Article