ಇದುವರೆಗೂ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ, ತಿರಸ್ಕರಿಸಿಯೂ ಇಲ್ಲ

kb--kolivada
ಬೆಂಗಳೂರು,ಅ.18- ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆ ಯನ್ನು ಇದುವರೆಗೂ ಅಂಗೀಕರಿಸಿಲ್ಲ. ತಿರಸ್ಕರಿಸಿಯೂ ಇಲ್ಲ ಎಂದು ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಇಂದಿಲ್ಲಿ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸಲು ನಿರ್ದಿಷ್ಟ ಸಮಯ ನಿಗದಿಪಡಿಸಿ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು. ಶ್ರೀನಿವಾಸ್ ಪ್ರಸಾದ್ ಅವರು ನೀಡಿರುವ ರಾಜೀನಾಮೆ ಪತ್ರವನ್ನು ಸ್ವೀಕರಿಸಲಾಗಿದೆ. ಅದರ ಬಗ್ಗೆ ಸ್ಪಷ್ಟವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜೀನಾಮೆ ಬಗ್ಗೆ ತಮ್ಮ ವಿವೇಚನೆ ಅನುಸಾರ ಇನ್ನಷ್ಟು ಸಮಯ ತೆಗೆದುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಕೋಳಿವಾಡ ತಿಳಿಸಿದರು.

ಅ.27ಕ್ಕೆ ಅಂತಿಮ ವಿಚಾರಣೆ: ಜೆಡಿಎಸ್‍ನಿಂದ ಅಮಾನತುಗೊಂಡಿರುವ ಎಂಟು ಮಂದಿ ಶಾಸಕರ ಅನರ್ಹತೆ ಪ್ರಕರಣದ ಅಂತಿಮ ವಿಚಾರಣೆಯನ್ನು ಅ.27ಕ್ಕೆ ಮುಂದೂಡಲಾಗಿದೆ ಎಂದು ಸಭಾಧ್ಯಕ್ಷರು ತಿಳಿಸಿದರು. ಎಂಟು ಮಂದಿ ಶಾಸಕರ ಪರ ಇಬ್ಬರು ವಕೀಲರು ಹಾಜರಾಗಿದ್ದರು. ಹಾಗಾಗಿ ಅಂತಿಮ ವಿಚಾರಣೆಯನ್ನು ಅ.27ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರಾದ ಜಮೀರ್ ಅಹಮ್ಮದ್ ಖಾನ್, ಚೆಲುವರಾಯ ಸ್ವಾಮಿ, ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿ ಸಿದ್ದೇಗೌಡ, ಕೆ.ಗೋಪಾಲಯ್ಯ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಹಾಗೂ ಭೀಮಾನಾಯಕ್ ಅವರ ಶಾಸಕತ್ವವನ್ನು ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ದೂರು ನೀಡಲಾಗಿತ್ತು. ಜೆಡಿಎಸ್ ಶಾಸಕರಾದ ಬಿ.ಬಿ.ನಿಂಗಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರು ಈ ಎಂಟು ಮಂದಿ ಶಾಸಕರ ಸದಸ್ಯತ್ವ ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುತ್ತಿರುವ ಅರೆನ್ಯಾಯಿಕ ಪ್ರಾಧಿಕಾರದಲ್ಲಿ ಸಭಾಧ್ಯಕ್ಷರು ಅಂತಿಮ ವಿಚಾರಣೆಯನ್ನು ಅ.27ಕ್ಕೆ ಮುಂದೂಡಿದ್ದಾರೆ.

 

► Follow us on –  Facebook / Twitter  / Google+

Sri Raghav

Admin