ಕರ್ನಾಟಕ ಬಂದ್ ನಡುವೆಯೇ ನಾಳೆ ಮೈಸೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ

BJP--01

ಬೆಂಗಳೂರು,ಜ.24-ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಬೆನ್ನಲ್ಲೇ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಾಳೆ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆಯಲಿದೆ.  ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದರೂ ಬಿಜೆಪಿ ಇದಕ್ಕೆ ತಲೆಕೆಡಿಸಿಕೊಂಡಿಲ್ಲ. ನಾಳೆ ಮೈಸೂರಿನಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸುತ್ತಿದ್ದಾರೆ.

ನಾಳಿನ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ರಾಜ್ಯದ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅಮಿತ್ ಷಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯ ಯಾತ್ರೆ ನಡೆಯುತ್ತಿರುವುದರಿಂದ ಅಕ್ಕಪಕ್ಕದ ಕ್ಷೇತ್ರಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಕರೆತಂದು ಶಕ್ತಿ ಪ್ರದರ್ಶಿಸಲು ಬಿಜೆಪಿ ತೀರ್ಮಾನಿಸಿದೆ. ಕಳೆದ ಒಂದು ವಾರದಿಂದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಕಾರ್ಯಕ್ರಮ ನಡೆಯುತ್ತಿರುವುದರಿಂದ ಶಕ್ತಿ ಪ್ರದರ್ಶಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲು ತನ್ನದೇ ಆದ ರಣತಂತ್ರ ರೂಪಿಸಿದೆ.

ಸಿದ್ದರಾಮಯ್ಯನವರ ವರ್ಚಸ್ಸಿನ ಸಂದರ್ಭದಲ್ಲೇ ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರವನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಿಂದ 5-6 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಎರಡೂ ಜಿಲ್ಲೆಗಳಲ್ಲಿ ನಿರ್ಣಾಯಕವಾಗಿರುವ ವೀರಶೈವ ಲಿಂಗಾಯಿತ ಮತಗಳನ್ನು ಸೆಳೆಯಲು ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಂದಾದರೆ ಒಕ್ಕಲಿಗ ಮತಗಳನ್ನು ಸೆಳೆಯಲು ಎಸ್.ಎಂ.ಕೃಷ್ಣ , ಆರ್.ಅಶೋಕ್ ಸಿ.ಪಿ.ಯೋಗೇಶ್ವರ್ ಹಾಗೂ ದಲಿತ ಮತಗಳಿಗೆ ಮಾಜಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಶಿವಣ್ಣ ಮತ್ತಿತರರನ್ನು ಮುಂದೆ ಬಿಟ್ಟಿದೆ. ನಾಳೆ ನಡೆಯಲಿರುವ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಕೆಲ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Sri Raghav

Admin