ಕಾವೇರಿ ತೀರ್ಪು : ಸುಪ್ರೀಂಗೆ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನ

Spread the love

Cauvery-Supreme--Court

ಬೆಂಗಳೂರು,ಮಾ.15- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ನಾಳೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಮುಖ್ಯವಾಗಿ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಬಳಿಕ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸುಪ್ರೀಂಕೋರ್ಟ್‍ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲ ನಾರಿಮನ್ ಮತ್ತು ಅವರ ತಂಡಕ್ಕೆ ತಿಳಿಸಲಿದೆ. ನದಿನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದರು. ಆದರೆ ಸರ್ಕಾರ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಪುನಃ ಮೇಲ್ಮನವಿ ಸಲ್ಲಿಸಿದರೆ ವ್ಯತಿರಿಕ್ತ ತೀರ್ಪು ಬರಬಹುದೆಂಬ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಈಗಾಗಲೇ ಸುಪ್ರೀಂಕೋಟ್ ್ ನೀಡಿರುವ ತೀರ್ಪಿನಿಂದ ಕರ್ನಾಟಕಕ್ಕೆ ಯಾವುದೇ ರೀತಿಯ ಹಿನ್ನಡೆಯಾಗಿಲ್ಲ ಎಂಬುದು ಮನವರಿಕೆಯಾಗಿರುವುದರಿಂದ ಅನಗತ್ಯವಾಗಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳಬಾರದೆಂದು ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಹಿಂದೇಟು ಹಾಕಿದೆ.

ಕಾನೂನು ತಜ್ಞರು ಹಾಗೂ ಸುಪ್ರೀಂಕೋಟ್ ್ನ ಕೆಲವು ವಕೀಲರು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಹಾಕಿದರೆ ನ್ಯಾಯಾಲಯ ಈ ಹಿಂದೆ ನೀಡಿದ ತೀರ್ಪಿಗೆ ವ್ಯತಿರಿಕ್ತವಾಗಿ ತೀರ್ಪು ನೀಡಿದರೆ ರಾಜ್ಯಕ್ಕೆ ಹಿನ್ನಡೆಯಾಗುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಮಂಡಳಿ ರಚನೆ ಬೇಡ:
ಆದರೆ ಸರ್ಕಾರದ ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ ಅವಕಾಶ ನೀಡಬಾರದು ಎಂದು ಒತ್ತಡ ಹಾಕಲು ಮುಂದಾಗಿದೆ. ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರು ಒಪ್ಪಿಕೊಳ್ಳೋಣ. ಮಂಡಳಿ ರಚನೆಯಿಂದ ಮತ್ತೆ ವಿವಾದ ಉಂಟಾಗುತ್ತದೆ. ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕೆಂಬ ನಿಲುವನ್ನು ಸರ್ಕಾರ ತೆಗೆದುಕೊಂಡಿದೆ. ಆರು ವಾರದೊಳಗೆ ಕಾವೇರಿ ನದಿನೀರು ಮಂಡಳಿಯನ್ನು ರಚನೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಮಂಡಳಿ ರಚನೆ ಮಾಡಿದರೆ ನಮ್ಮ ಅಣೆಕಟ್ಟುಗಳು, ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತದೆ. ಹೀಗಾಗಿ ಮಂಡಳಿಯೇ ಬೇಡ ಎಂಬುದು ಕರ್ನಾಟಕದ ವಾದವಾಗಿದೆ.  ಆದರೆ ತಮಿಳುನಾಡು ಮಾತ್ರ ರಚನೆ ಮಾಡಲೇಬೇಕೆಂದು ಪಟ್ಟು ಹಿಡಿದಿದೆ. ನಿರ್ವಹಣಾ ಮಂಡಳಿ ರಚನೆ ಮಾಡುವುದು ಸಂಸತ್ತಿಗಿರುವ ಪರಮಾಧಿಕಾರ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದೆ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ತೀರ್ಪಿನ ಹಿನ್ನೆಲೆ:
ಕಳೆದ ಫೆ.16ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರ ನೇತೃತ್ವದ ದ್ವಿಸದಸ್ಯ ಪೀಠ ಕಾವೇರಿ ನ್ಯಾಯ ಮಂಡಳಿ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ತೀರ್ಪು ನೀಡಿತ್ತು. ಈ ತೀರ್ಪಿನ ಪ್ರಕಾರ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರಿಗಾಗಿ 4.5 ಟಿಎಂಸಿ ಹಾಗೂ ಕೃಷಿ ಚಟುವಟಿಕೆಗಳಿಗೆ 14.75 ಟಿಎಂಸಿ ನೀರು ಬಳಸಿಕೊಳ್ಳಲು ಅವಕಾಶ ನೀಡಿತ್ತು.  ಕಾನೂನು ತಜ್ಞರ ಪ್ರಕಾರ ತೀರ್ಪು ರಾಜ್ಯಕ್ಕೆ ಪೂರಕವಾಗಿದೆ ಎಂದು ಹೇಳಿದ್ದರು. ಆದರೆ ಜೆಡಿಎಸ್ ವರಿಷ್ಠ ದೇವೇಗೌಡರು ಮಾತ್ರ ತೀರ್ಪು ಪ್ರಶ್ನಿಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತೆ ಹೇಳಿದ್ದರು. ಸರ್ಕಾರ ಮಾತ್ರ ಮೇಲ್ಮನವಿ ಸಹವಾಸವೇ ಬೇಡ ಎಂಬ ನಿಲುವಿಗೆ ಬಂದಿದೆ.

Sri Raghav

Admin