ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೇಕೆ ಗೊತ್ತೇ..?
ಬೆಂಗಳೂರು, ಏ.5- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಟ ಸುದೀಪ್ ಇಂದು ಭೇಟಿಯಾಗಿದ್ದು, ಅವರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಸುದೀಪ್ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಅವರ ರಾಜಕೀಯ ನಡೆ ಬಗ್ಗೆ ಹಲವು ವಿಚಾರಗಳು ಗರಿಗೆದರಿವೆ.
ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಯಾವ ಪಕ್ಷದ ಪರ ಪ್ರಚಾರಕ್ಕೆ ಇಳಿಯಲಿದ್ದಾರೆ ಕಿಚ್ಚ ಸುದೀಪ್ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ. ಇದೇ 7ರಂದು ಪ್ರಾರಂಭವಾಗಲಿರುವ ಸಿಸಿಎಲ್ ಕ್ರಿಕೆಟ್ ಟೋರ್ನಿ ಉದ್ಘಾಟನೆಗೆ ಆಗಮಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲು ಸುದೀಪ್ ತೆರಳಿದ್ದರು.
ಈ ಸಂದರ್ಭದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರಿಂದ ಚುನಾವಣೆ ಸಂದರ್ಭವಾಗಿರುವ ಹಿನ್ನೆಲೆಯಲ್ಲಿ ಈ ಭೇಟಿಗೆ ಇನ್ನಿಲ್ಲದ ಮಹತ್ವ ಬಂದಿದೆ.