ಗ್ರಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ನ.4ರಂದು ಚುನಾವಣೆ
ಕನಕಪುರ, ಅ.18-ಹಾರೋಹಳ್ಳಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಸ್ಥಾನಕ್ಕೆ ನವೆಂಬರ್ 4 ರಂದು ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಡಾ.ಮಮತಾ ಸೂಚಿಸಿದ್ದಾರೆ.ಕಳೆದ ಮೂರು ತಿಂಗಳ ಹಿಂದೆ ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಶಿವಕುಮಾರ್ರವರ ದುರ್ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿ, ಕನಕಪುರ ಪೌರಾಯುಕ್ತ ಡಿ.ರಮೇಶ್ರವರನ್ನು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶಿಸಿದ್ದಾರೆ.37 ಸದಸ್ಯ ಬೆಂಬಲ ಹೊಂದಿರುವ ಪಂಚಾಯತಿಯ ಪ್ರಾರಂಭಿಕ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 19 ಮಂದಿ ಮತ್ತು ಕಾಂಗ್ರೆಸ್ ಬೆಂಬಲಿತ 18 ಮಂದಿ ಜಯಗಳಿಸಿದ್ದರೂ, ಕೆಲವು ತಂತ್ರಗಾರಿಕೆಗಳಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಮರಣ ಹೊಂದಿದ್ದರಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ತಾಮಸಂದ್ರ ನಾಗೇಶ್ ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಒಗ್ಗಟ್ಟಿನ ಪ್ರದರ್ಶನದ ಮೂಲಕ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದರೂ ತಂತ್ರಗಾರಿಕೆಯ ಚುನಾವಣೆಯಲ್ಲಿ ಏನಾಗುತ್ತದೆ ಎಂಬುದು ಕುತೂಹಲದ ಸಂಗತಿಯಾಗಿದೆ.
► Follow us on – Facebook / Twitter / Google+