ಚಿಕ್ಕಮಗಳೂರು ಬರಪೀಡಿತ ಜಿಲ್ಲೆಯಾಗಿ ಘೋಷಿಸಿ : ಕಾಗೋಡು ತಿಮ್ಮಪ್ಪನವರಿಗೆ ಪತ್ರ
ಚಿಕ್ಕಮಗಳೂರು,ಸೆ.16- ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿ ಭಾರೀ ಪ್ರಮಾಣದಲ್ಲಿ ಉಂಟಾಗಿದ್ದು , ಚಿಕ್ಕಮಗಳೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ನಿನ್ನೆ ಕಂದಾಯ ಸಚಿವರಿಗೆ ಪತ್ರ ಬರೆದಿರುವ ಪರಮೇಶ್ವರ್, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಬಂದಿಲ್ಲ. ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಜನರಿಗೆ ಕುಡಿಯುವ ನೀರಿನ ತೊಂದರೆಯಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಅಂತರ್ಜಲ ಕುಸಿದಿದೆ. ಈ ಎಲ್ಲಾ ಸಂಗತಿಯನ್ನು ಪರಿಗಣಿಸಿ ತಕ್ಷಣ ಈ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಜಿಲ್ಲೆಯ ಪ್ರಗತಿಗೆ ಸಹಕರಿಸಬೇಕೆಂದು ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.