ನಾಳೆಯೊಳಗ ಜಯಲಲಿತಾ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡುವಂತೆ ಕೋರ್ಟ್ ಸೂಚನೆ
ಚನ್ನೈ, ಅ.4- ಜಯಲಲಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಚನ್ನೈ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಟ್ರಾಫಿಕ್ ರಾಮಸ್ವಾಮಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಬಗ್ಗೆ ನಾಳೆ ಮಾಹಿತಿ ನೀಡುವಂತೆ ಸೂಚಿಸಿದೆ. ಜಯಲಲಿತಾ ಅವರು ಕಳೆದ 10 ದಿನಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗದ ಹಿನ್ನೆಲೆಯಲ್ಲಿ ಟ್ರಾಫಿಕ್ ರಾಮಸ್ವಾಮಿಯವರು ಮಾಹಿತಿ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ನಾಳೆಯೊಳಗೆ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದೆ. ಜಯಾ ಅವರ ಅನಾರೋಗ್ಯದ ಬಗ್ಗೆ ನಾನಾ ಪುಕಾರಗಳು ತಮಿಳುನಾಡಿನಾದ್ಯಂತ ಹಬ್ಬಿದ್ದವು. ಜಯಲಲಿತಾ ಅವರಿಗೆ ಹಾಗಾಗಿದೆ, ಹೀಗಾಗಿದೆ ಎಂಬ ವದಂತಿಗಳು ಕೇಳಿಬಂದಿದ್ದವು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಸ್ಪಷ್ಟೀಕರಣ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಲಂಡನ್ನಿಂದ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅಪೋಲೋ ಆಸ್ಪತ್ರೆ ಮುಂದೆ ಜಯಾ ಅಭಿಮಾನಿಗಳು ಆತಂಕದಿಂದ ಜಮಾಯಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹಬ್ಬಿದ್ದವು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಹಲವರನ್ನು ಬಂಧಿಸಿದ್ದರು.