ನಾಳೆ ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

Tippu-Jayanti--02

ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಮಡಿಕೇರಿ, ಮಂಗಳೂರು, ಮೈಸೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಸ್ಥಳೀಯ ಸಂಘಟನೆಗಳು ಮಡಿಕೇರಿ ಬಂದ್‍ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಿಜೆಪಿ, ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಕೊಡವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿ ಜಯಂತಿ ಕೈ ಬಿಡಲು ಮನವಿ ಮಾಡಿದ್ದಲ್ಲದೆ, ನಾಳೆ ಮಡಿಕೇರಿ ಬಂದ್‍ಗೆ ಕರೆ ಕೊಟ್ಟಿವೆ.

ಈ ಹಿಂದೆ ಟಿಪ್ಪು ಜಯಂತಿ ನಡೆದ ಸಂದರ್ಭದಲ್ಲಿ ನಡೆದ ಕಹಿ ಘಟನೆ ಹಾಗೂ ಹೊರ ರಾಜ್ಯದಿಂದ ಬಂದ ಹಲವು ದುಷ್ಕರ್ಮಿಗಳಿಂದ ಶಾಂತಿ ಕದಡುವ ಪ್ರಯತ್ನ ನಡೆದಿತ್ತು ಎಂಬ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್ ಹಾಗೂ ಸ್ಟೇ ಹೋಮ್‍ಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಅದೇ ರೀತಿ ಮಂಗಳೂರಿನಲ್ಲಿ ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿರುವುದರಿಂದ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಚಿತ್ರದುರ್ಗದಲ್ಲೂ ಕೂಡ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಜತೆಗೆ ಕೆಎಸ್‍ಆರ್‍ಪಿ ಪ್ಲಟೂನ್‍ಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳು ಗಸ್ತಿನಲ್ಲಿ ಇರುತ್ತಾರೆ. ನಾಳೆ ವಿಧಾನಸೌಧದ ಮುಂಭಾಗ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳೀಯ ಪೊಲೀಸರ ಜತೆಗೆ 20 ಸಿಎಆರ್ ತುಕಡಿ, 30 ಕೆಎಸ್‍ಆರ್‍ಪಿ ಪ್ಲಟೋನ್‍ಗಳನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ಸಂಬಂಧ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

Sri Raghav

Admin