ಬಡವರಿಗೆ ಯೋಜನೆಗಳನ್ನು ತಲುಪಿಸಿ : ಸಂಸದ ಡಿ.ಕೆ.ಸುರೇಶ್

dk--suresh

 

ತುಮಕೂರು, ಆ.17- ರೈತರು, ಕೂಲಿಕಾರ್ಮಿಕರು, ಸೇರಿದಂತೆ ಬಡವರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ಡಿ.ಕೆ.ಸುರೇಶ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಹಾಗೂ ಯೋಜನೆಗಳ ಪ್ರಯೋಜನ ಅರ್ಹರಿಗೆ ಸಿಗಬೇಕು. ಇದಕ್ಕಾಗಿ 331 ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಿಗೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸೂಚನೆ ನೀಡಿದರು.ನುಗ್ಗೆ , ಮಾವು, ತೆಂಗು, ಹಲಸು ಮತ್ತು ಕರಿಬೇವು ಸಸಿಗಳನ್ನು ಪ್ರತಿಯೊಬ್ಬರಿಗೆ ನೀಡಿ, ಅವರ ಮನೆಯ ಆವರಣ ಅಥವಾ ಕೈತೋಟಗಳಲ್ಲಿ ಬೆಳಸುವ ರೀತಿಯಲ್ಲಿ ಜನರಲ್ಲಿ ಅರಿವು ಮೂಡಿಸಬೇಕು.
ಇತ್ತೀಚಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಮಳೆಯ ನೀರನ್ನು ಸಂಗ್ರಹಿಸಿ ಹಿಂಗಿಸುವ ಕೆಲಸ ಆಗಬೇಕಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಹೊಂಡಗಳ ನಿರ್ಮಾಣ ಮತ್ತು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 20 ಚೆಕ್ ಡ್ಯಾಂಗಳನ್ನು ನಿರ್ಮಿಸಬೇಕು ಎಂದು ಸಂಸದರು ಸೂಚಿಸಿದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜಿ.ಶಾಂತಾರಾಮ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 10 ಚೆಕ್ ಡ್ಯಾಂಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಸಂಸದ ಚಂದ್ರಪ್ಪ,ಶಾಸಕರಾದ ಕೆ.ಎನ್. ರಾಜಣ್ಣ, ಸುಧಾಕರ್ ಲಾಲ್, ಷಡಕ್ಷರಿ, ಶ್ರೀನಿವಾಸ್, ರಫಿಕ್ ಅಹಮದ್, ತಿಮ್ಮರಾಯಪ್ಪ, ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

 

► Follow us on –  Facebook / Twitter  / Google+

Sri Raghav

Admin