ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ : ಸದಾನಂದಗೌಡ
ಬೆಂಗಳೂರು, ನ.6- ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡು ತ್ತಿದೆಯೇ ಎಂಬ ಸಂಶಯ ಉಂಟಾಗುತ್ತಿದೆ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಕಾರ್ಯಾಚರಣೆ ನಡೆಯುತ್ತಿದೆಯೇ ಎಂಬ ಗುಮಾನಿ ಉಂಟಾಗುತ್ತಿದ್ದು, ಈ ಹತ್ಯೆ ಹಿಂದೆ ರಾಜ್ಯ ಸರ್ಕಾರದ ಕುಮ್ಮಕ್ಕು ಇದೆ ಎಂಬ ಅನುಮಾನ ಕಾಡುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಹತ್ಯೆಗಳು ಮುಂದುವರೆದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದು ಅನಿವಾರ್ಯವಾಗಲಿದೆ. ಕೇಂದ್ರ ಗೃಹ ಸಚಿವ ರಾಜನಾಥಸಿಂಗ್ ಅವರು ಮಧ್ಯ ಪ್ರವೇಶ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದ ಅವರು, ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಮೂಲಕ ಚುನಾವಣೆ ಲಾಭ ಪಡೆಯಲು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳಾಗುತ್ತಿರುವುದನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದರು.
ರಾಜ್ಯಪಾಲರು ಈ ಸಂಬಂಧ ಮಧ್ಯಪ್ರವೇಶ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಬೇಕೆಂದು ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತ ರುದ್ರೇಶ ಹತ್ಯೆ ಹಿಂದಿರುವ ಸಂಘಟನೆ ಹೆಸರನ್ನು ಬಹಿರಂಗ ಪಡಿಸದಂತೆ ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಿದರು.