ಮತ್ತೆ ಸುಪ್ರೀಂ ಮೆಟ್ಟಿಲೇರಿದ ಜಲ್ಲಿಕಟ್ಟು, ಜ.30ರಂದು ವಿಚಾರಣೆ
ನವದೆಹಲಿ, ಜ.25- ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡಲು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾದ ಹೊಸ ಕಾನೂನು ಪ್ರಶ್ನಿಸಿ ಭಾರತದ ಪ್ರಾಣಿ ಕಲ್ಯಾಣ ಸಂಘ ಮತ್ತು ಪ್ರಾಣಿಗಳ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿರುವ ಇತರ ಸಂಘಟನೆಗಳು ಸಲ್ಲಿಸಿರುವ ಅರ್ಜಿ ಕುರಿತು ಜ.30ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಜಲ್ಲಿಕಟ್ಟು ಆಚರಣೆಗೆ ಅವಕಾಶ ನೀಡಲು ತಮಿಳುನಾಡು ವಿಧಾನಸಭೆ ಅಂಗೀಕರಿಸಿರುವ ಹೊಸ ಕಾನೂನು, ಸುಪ್ರೀಂಕೋರ್ಟ್ನ ಈ ಹಿಂದಿನ ತೀರ್ಪಿಗೆ ವ್ಯತಿರಿಕ್ತವಾಗಿದೆ ಎಂದು ಪ್ರಾಣಿ ಹಕ್ಕುಗಳ ಸಮೂಹ ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠದ ಮುಂದೆ ಸಲ್ಲಿಸಲಾಗಿರುವ ಅರ್ಜಿಗಳ ತ್ವರಿತ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಿಸಿದಂತೆ ಜನವರಿ 6, 2016ರ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳುವುದಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಸೋಮವಾರ ನಡೆಯಲಿದೆ. ಈ ಕುರಿತು ತಮ್ಮ ಅರ್ಜಿಗಳು ಸಲ್ಲಿಸಬೇಕೆಂದು ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಆನಂದ್ ಗ್ರೋವರ್ ಅವರುಗಳಿಗೆ ಪೀಠ ತಿಳಿಸಿದೆ.
< Eesanje News 24/7 ನ್ಯೂಸ್ ಆ್ಯಪ್ >