ಮುನಿಸಿಕೊಂಡಿದ್ದ ಸತೀಶ್ ಜಾರಕಿಹೊಳಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿ
ಬೆಂಗಳೂರು,ಏ.26-ಶ್ರೀನಿವಾಸ್ ಪ್ರಸಾದ್ ಅವರಿಗಿಂತ ಮುಂಚೆ ನಾನೇ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿ ಮುನಿಸಿಕೊಂಡು ದೂರವಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತೀಶ್ ಜಾರಕಿಹೊಳಿ ಅವರೊಂದಿಗೆ ನಿನ್ನೆ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿ ಅವರ ಮುನಿಸನ್ನು ತಣಿಸುವಲ್ಲಿ ಫಲಪ್ರದವಾಗಿದ್ದಾರೆ.
ಸಚಿವಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಕೈಬಿಡಲಾಗಿತ್ತು. ಅದಕ್ಕೂ ಮುನ್ನವೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇತ್ತೀಚೆಗೆ ಅವರು ಸಕ್ರೀಯ ರಾಜಕಾರಣದಿಂದ ದೂರು ಉಳಿದಿದ್ದರೂ ಸಹ ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದರು. ಇದಲ್ಲದೆ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಗಳು ಕೂಡ ಹರಡಿದ್ದವು. ಮಾಜಿ ಪ್ರಧಾನಿ ದೇವೇಗೌಡ ಇತ್ತೀಚೆಗೆ ಅವರ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿ ಕೆಲಕಾಲ ಚರ್ಚಿಸಿ ಬಂದಿದ್ದರು. ಸತೀಶ್ ಜಾರಕಿಹೊಳಿ ಅವರು ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ.
ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ವಿರುದ್ದ ಅಸಮಾಧಾನಗೊಂಡು ದೂರ ಉಳಿದಿದ್ದ ಅಂಬರೀಶ್ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರೊಂದಿಗೂ ಕೂಡ ಮಾತುಕತೆ ನಡೆಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >