ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ

SSLC-Exams

ಬೆಂಗಳೂರು,ಮಾ.30-ವಿದ್ಯಾರ್ಥಿ ಜೀವನದ ಮೊದಲನೇ ಮಹತ್ವಘಟ್ಟ ಎನಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯಾದ್ಯಂತ ಇಂದು ಆರಂಭವಾಯಿತು. ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಬೀದರ್, ವಿಜಯಪುರ, ಕಲಬುರಗಿ, ಬೆಳಗಾವಿ ಸೇರಿದಂತೆ ಒಟ್ಟು 2770 ಕೇಂದ್ರ ಆರಂಭವಾಗಿದೆ.  ಮೊದಲ ದಿನವಾದ ಇಂದು ಕನ್ನಡ ಭಾಷೆಗೆ ಪರೀಕ್ಷೆ ನಡೆದಿದ್ದು, ರಾಜ್ಯದ ಯಾವುದೇ ಕೇಂದ್ರಗಳಲ್ಲಿ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ. ಬಹುತೇಕ ಕಡೆ ವಿದ್ಯಾರ್ಥಿಗಳು ಹರ್ಷದಿಂದಲೇ ಪರೀಕ್ಷೆ ಎದುರಿಸಿದ್ದಾರೆ.

ವಿದ್ಯಾರ್ಥಿಗಳು ಬೆಳಗ್ಗೆ 9.15ರಿಂದ 9.30ರ ಸಮಯದೊಳಗೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಸಮಯ ನಿಗದಿಪಡಿಸಲಾಗಿತ್ತು. 9.45ರವರೆಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಈ ಹಿಂದೆ ಬೆಳಗ್ಗೆ 9.30ಕ್ಕೆ ಪರೀಕ್ಷೆ ಪ್ರಾರಂಭವಾದ ಅನಂತರ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯ ಪ್ರವೇಶ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 15 ನಿಮಿಷ ವಿನಾಯಿತಿ ನೀಡಲಾಗಿದೆ. ರಾಜ್ಯಾದ್ಯಂತ ಒಟ್ಟು 8,77,174 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದಾರೆ.

SSLC-Exams

ರಾಜ್ಯದ 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬಾಲಕರು 4,69,835 ಮತ್ತು ಬಾಲಕಿಯರು 4,07,339 ಸೇರಿದಂತೆ ಒಟ್ಟು 8,77,174 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 72 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 17 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸರಕಾರಿ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ 226, ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ 564, ಅನುದಾನ ರಹಿತ ಕೇಂದ್ರಗಳಲ್ಲಿ 364 ಹೀಗೆ ಒಟ್ಟು 1,184 ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಅಲ್ಲದೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕೊಠಡಿ, ಸರಕಾರಿ ಕೇಂದ್ರ 233, ಅನುದಾನಿತ ಕೇಂದ್ರ 659 ಹಾಗೂ ಅನುದಾನ ರಹಿತ ಕೇಂದ್ರಗಳಲ್ಲಿ 469 ಹೀಗೆ ಒಟ್ಟು 1,361 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನೋಂದಣಿಯಾಗಿರುವ ಪ್ರೌಢಶಾಲೆಗಳಲ್ಲಿ ಸರಕಾರಿ 5,163, ಅನುದಾನಿತ 3,301, ಅನುದಾನ ರಹಿತ 5,834 ಪ್ರೌಢಶಾಲೆಗಳ ಸಹಿತ ಒಟ್ಟು 14,298 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ಹಾಜರಾಗಿದ್ದಾರೆ.
ಇನ್ನು ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು 40 ಸಿಸಿಟಿವಿ ಕ್ಯಾಮೆರಾಗಳನ್ನು ಕೆಎಸ್‍ಇಇಬಿ ಕಚೇರಿಯಲ್ಲಿ ಅಳವಡಿಸಲಾಗಿದೆ. 30 ಜಿಲ್ಲಾ ಖಜಾನೆಗಳಲ್ಲೂ ಸಿಸಿಟಿವಿ ಅಳವಡಿಸಲಾಗಿದ್ದು. ದಿನದ 24 ಗಂಟೆಯೂ ಖಜಾನೆಗಳಿಗೆ ಭದ್ರತೆ ಒದಗಿಸಲಾಗಿದೆ. ಇನ್ನು 2,770 ಪರೀಕ್ಷಾ ಕೇಂದ್ರಗಳಲ್ಲಿ 1,184 ಕಡೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಉಚಿತ ಬಸ್ ಪ್ರಯಾಣ:

ಹಾಗೆಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳು ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳುವ ವ್ಯವಸ್ಥೆಯನ್ನು ಮಾಡಲಾಗಿದೆ.

ಜೆರಾಕ್ಸ್ ಕೇಂದ್ರಗಳಿಗೆ ಬೀಗ :

ಏಪ್ರಿಲ್ 12ರವರೆಗೂ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುವ ಹಿನ್ನಲೆ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.  ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ  ಹಾಗೂ ಸಮೀಪದ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin