ರೈತರ ಸಾಲಮನ್ನಾ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಆದೇಶ

Madras-HighCourt

ಚೆನ್ನೈ,ಏ.4– ಮಹತ್ವದ ಬೆಳವಣಿಗೆಯೊಂದರಲ್ಲಿ ಸಹಕಾರ ಬ್ಯಾಂಕ್‍ಗಳಿಂದ ರೈತರು ಪಡೆದ ಸಾಲಗಳನ್ನು ಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆದೇಶ ನೀಡಿದೆ. ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕಳೆದ 23 ದಿನಗಳಿಂದ ದೆಹಲಿಯ ಜಂತರ್-ಮಂತರ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡು ರೈತರಿಗೆ ಈ ಆದೇಶದಿಂದ ಜಯ ಲಭಿಸಿದಂತಾಗಿದೆ.   ಭೀಕರ ಬರಗಾಲದಿಂದ ಕಂಗೆಟ್ಟಿರುವ ತಮಿಳುನಾಡಿನ ರೈತರು ಸಹಕಾರ ಬ್ಯಾಂಕ್‍ಗಳಿಂದ ಪಡೆದಿರುವ ಸಾಲಗಳನ್ನು ಮನ್ನಾ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತು ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಇಂದು ವಿಚಾರಣೆ ನಡೆಸಿತು.

ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ತಮಿಳುನಾಡಿನ ರೈತರು ಕಳೆದ 23 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸಾಲ ಮನ್ನಾ ಮಾಡುವಂತೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.   ವಾದ-ಪ್ರತಿವಾದಗಳನ್ನು ಆಲಿಸಿದ ಪೀಠವು ಸಹಕಾರ ಸಂಘಗಳಿಂದ ಸಾಲ ಪಡೆದ ಎಲ್ಲ ರೈತರ ಸಾಲಗಳನ್ನು ಮನ್ನಾ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.   ತಾಂಜಾವೂರು, ತಿರುಚಿರಾಪಲ್ಲಿ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳ ರೈತರು ಮೃತ ಕೃಷಿಕರ ತಲೆಬುರುಡೆಗಳೊಂದಿಗೆ ಅರೆಬೆತ್ತಲೆಯಾಗಿ ಕಳೆದ 23 ದಿನಗಳಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮತ್ತು ನಿರಶನ ಕೈಗೊಂಡಿದ್ದರು. ಕೇಂದ್ರ ಸರ್ಕಾರವು 40 ಸಾವಿರ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು ಮತ್ತು ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದರು.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‍ಗಾಂಧಿ, ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಸೇರಿದಂತೆ ಕೆಲವು ಗಣ್ಯರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೆ ಸಾಲಮನ್ನಾ ಮಾಡುವಂತೆ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಒತ್ತಾಯಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin