ಹಳೆ ನಿರ್ಣಯಕ್ಕೆ ಸರ್ಕಾರ ಬದ್ಧವಿರಲಿ : ಯಡಿಯೂರಪ್ಪ

YADI

ಬೆಳಗಾವಿ,ಅ.3- ತಮಿಳುನಾಡಿಗೆ ಕಾವೇರಿ ನೀರು ಹರಿಸುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗಿತ್ತೋ ಅದೇ ನಿರ್ಣಯಕ್ಕೆ ಸರ್ಕಾರ ಬದ್ಧವಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇಂದಿಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಅವರು, ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾವೇರಿ ನಿಯಂತ್ರಣ ಮಂಡಳಿ ರಚಿಸಲು ಅವಕಾಶ ನೀಡುವುದಿಲ್ಲ ಎಂದರು.
ಈ ಕುರಿತಂತೆ ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟು, ಕಾವೇರಿ ನೀರು ನಿಯಂತ್ರಣ ಮಂಡಳಿ ರಚಿಸದಂತೆ ನೋಡಿಕೊಳ್ಳುವುದು ನಮ್ಮ ಪ್ರಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಪ್ರಸ್ತುತ ಕಾರ್ಯಕಾರಿಣಿಯಲ್ಲಿ ಪ್ರಸಕ್ತ ರಾಜಕೀಯ ಸ್ಥಿತಿ-ಗತಿಗಳ ಬಗ್ಗೆ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ, ಪಕ್ಷದ ಮುಂದಿನ ಹೋರಾಟದ ರೂಪುರೇಷೆಗಳನ್ನೂ ಕೂಡ ಸಿದ್ಧಪಡಿಸಲಾಗುವುದು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳಿಗೆ ಇನ್ನು ಕೇವಲ 550 ದಿನಗಳಷ್ಟೇ ಬಾಕಿ ಉಳಿದಿದ್ದು, ಆ ಚುನಾವಣೆ ಎದುರಿಸಲು ಪಕ್ಷವನ್ನು ಸಿದ್ಧಗೊಳಿಸಲಾಗುವುದು ಎಂದು ಹೇಳಿದರು. ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷ ಸ್ಪರ್ಧಿಸಲಿದ್ದು, ಅದಕ್ಕೆ ಅನುಕೂಲ ವಾತಾವರಣ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ ಯಡಿಯೂರಪ್ಪ, ಗೆಲ್ಲ ಬಹುದಾದ 150 ಕ್ಷೇತ್ರಗಳನ್ನು ಗುರಿತಿಸಿ ಅಲ್ಲಿಗೆ ಹೆಚ್ಚಿನ ದೊಡ್ಡ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು. ಇನ್ನೂ ಅನೇಕ ರಾಜಕೀಯ ವಿಷಯಗಳ ಬಗ್ಗೆಯೂ ಇಂದು ನಾಳೆ ನಡೆಯುವ ಕಾರ್ಯಕಾರಿಣಿಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ಆ ಸುದ್ದಿ ಬೇಡ:
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಪತ್ರಕರ್ತರು ಪ್ರಶ್ನಿಸಿದಾಗ ಗರಂ ಆದ ಯಡಿಯೂರಪ್ಪ ಅವರು, ಡೋಂಟ್ ಟಾಕ್ ಎಬೌಟ್ ಅದರ್ ಥಿಂಗ್ಸ್ ( ಬೇರೆ ಯಾವುದೇ ವಿಷಯಗಳ ಬಗ್ಗೆ ಏನೂ ಕೇಳಬೇಡಿ ಎಂದು ಪತ್ರಕರ್ತರನ್ನು ಗದರಿದರು.

► Follow us on –  Facebook / Twitter  / Google+

Sri Raghav

Admin