ಹೈದರಾಬಾದ್,ನ.1-ಏಕಾದಶಿ ಪ್ರಯುಕ್ತ ಭಾರೀ ಸಂಖ್ಯೆಯ ಭಕ್ತರು ಸೇರುವ ಹಿನ್ನೆಲೆಯಲ್ಲಿ ಏಕಾಏಕಿ ನೂಕುನುಗ್ಗಲಿಂದ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಭಕ್ತರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಇತಿಹಾಸ ಪ್ರಸಿದ್ದ ಶ್ರೀಕಾಕುಳಂನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಬಗ್ಗೆ ದಿಗ್ಬ್ರಾಂತಿ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಶ್ರೀಕಾಕುಳಂನ ಕಾಸಿಬುಗ್ಗಾದಲ್ಲಿರುವ ಇತಿಹಾಸ ಪ್ರಸಿದ್ದ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ಇಂದು ಬೆಳಗ್ಗೆ ಭಾರೀ ಪ್ರಮಾಣದಲ್ಲಿ ಭಕ್ತರು ಸುತ್ತಮುತ್ತಲ ಭಾಗಗಳಿಂದ ಆಗಮಿಸಿದ್ದರು.
ಏಕಾದಶಿ ಮತ್ತು ಶನಿವಾರದ ದಿನ ವೆಂಟೇಶ್ವರ ಸ್ವಾಮಿಯ ದರ್ಶನ ಪಡೆದರೆ ಬಯಸಿದ್ದೆಲ್ಲವೂ ಪ್ರಾಪ್ತಿಯಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಹೀಗಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಸೇರಿದ್ದರು.
ದೇವಸ್ಥಾನಕ್ಕೆ ತೆರಳುವ ಪ್ರವೇಶದ್ವಾರವು ಕಡಿದಾಗಿದ್ದು ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಏಕಾಏಕಿ ನೂಕುನುಗ್ಗಲು ಉಂಟಾಯಿತು. ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ಹತ್ತು ಮಂದಿ ಸಾವನ್ನಪ್ಪಿದ್ದು, ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆ್ಯಂಬುಲೆನ್‌್ಸ ವೈದ್ಯರ ತಂಡ ಆಗಮಿಸಿ ಗಾಯಾಳುಗನ್ನು ಶ್ರೀಕಾಕುಳಂನಲ್ಲಿರುವ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಗೊಂದಲ ಉಂಟಾಯಿತು. ದರ್ಶನ ಪಡೆಯುವ ಧಾವಂತದಲ್ಲಿ ನಾ ಮುಂದು, ತಾ ಮುಂದು ಎಂಬಂತೆ ಒಳಗಡೆ ಪ್ರವೇಶಿಸಲು ಮುಗಿಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ತುರ್ತು ಸಿಬ್ಬಂದಿ ಹರಸಾಹಸಪಟ್ಟರು. ಗಾಯಾಳುಗಳನ್ನು ತಕ್ಷಣವೇ ಆ್ಯಂಬುಲೆನ್‌್ಸ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರಪ್ರದೇಶದ ಕೃಷಿ ಸಚಿವ ಕೆ.ಅಚ್ಚನಾಯ್ಡು ದೇವಸ್ಥಾನಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು, ಆಡಳಿತ ಮಂಡಳಿ, ಜಿಲ್ಲಾಡಳಿತ, ರಕ್ಷಣಾ ತಂಡ ಮತ್ತಿತರರು ಶಾಂತ ರೀತಿಯಲ್ಲಿರುವಂತೆ ಮನವಿ ಮಾಡಿಕೊಂಡರು.
ಇದೀಗ ದೇವಸ್ಥಾನದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ಯಾರೂ ಬರಬಾರದೆಂದು ಮನವಿ ಮಾಡಿದ್ದಾರೆ. ಅಲ್ಲದೆ ತಾತ್ಕಾಲಿಕವಾಗಿ ದೇವಸ್ಥಾನದಲ್ಲಿ ದರ್ಶನವನ್ನು ಸ್ಥಗಿತಗೊಳಿಸಲಾಗಿದೆ.
ನಾಯ್ಡು ಸಂತಾಪ:
ಘಟನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್‌್ಸ ನಲ್ಲಿ ಪೋಸ್ಟ್ ಮಾಡಿರುವ ನಾಯ್ಡು, ಇದೊಂದು ಹೃದಯವಿದ್ರಾವಕ ಘಟನೆ. ಇದಕ್ಕೆ ಯಾವ ರೀತಿ ಸಂತಾಪ ಸೂಚಿಸಬೇಕು ಎಂಬುದಕ್ಕೆ ನನ್ನ ಬಳಿ ಪದಗಳಿಲ್ಲ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡಬೇಕೆಂದು ವೈದ್ಯರಿಗೆ ಸೂಚನೆ ನೀಡಲಾಗಿದೆ.
