Friday, May 17, 2024
Homeರಾಜ್ಯಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ

ಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ

ಬೆಳ್ತಂಗಡಿ, ಮೇ.2- ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿನ್ನೆ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ನಿನ್ನೆ ಬೆಳಿಗ್ಗೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು.

ಸಂಜೆ 6 ಗಂಟೆಯಿಂದ ವಧು-ವರ ಜೋಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಹೋದರು. ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸಂಜೆ ಗಂಟೆ 6.45ಕ್ಕೆ ಸರಿಯಾಗಿ ಗೋಧೂಳಿಲಗ್ನ ಸುಮುಹೂರ್ತದಲ್ಲಿ ವೇದಿಕೆಯಿಂದ ವೇದ-ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರ ಧಾರಣೆ ಮಾಡಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು: ಚಲನಚಿತ್ರನಟ ದೊಡ್ಡಣ್ಣ ಮಾತನಾಡಿ, ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರ್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕøತ ನಾಗರಿಕರಾಗಿ ರೂಪಿಸಬೇಕು. ತನ್ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು ಎಂದು ಚಲನಚಿತ್ರನಟ ದೊಡ್ಡಣ್ಣ ನೂತನ ದಂಪತಿಗಳಿಗೆ ಕಿವಿಮಾತು ಹೇಳಿದರು.

ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯ ಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಇತಿ-ಮಿತಿ ಇಲ್ಲ. ರಾಮಾಯಣ ಮತ್ತು ಮಹಾಭಾರತದಂತಹ ಪೌರಾಣಿಕ ಕೃತಿಗಳ ಅಧ್ಯಯನದೊಂದಿಗೆ ಸ್ವಾಧ್ಯಾಯ ಮಾಡಬೇಕು. ದೇವಸ್ಥಾನಕ್ಕೆ ಹೋಗುವಾಗ ಸಂಚಾರಿ ದೂರವಾಣಿ ಕೊಂಡುಹೋಗಬಾರದು. ದೇವರ ಎದುರು ಕಣ್ಣು ಮುಚ್ಚಬಾರಾದು. ತೆರೆದ ಕಣ್ಣುಗಳಿಂದ ಏಕಾಗ್ರತೆಯೊಂದಿಗೆ ದೇವರ ದರ್ಶನ, ಧ್ಯಾನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.
ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರಯುತ ಜೀವನ ನಡೆಸಬೇಕು. ಗ್ರಾಮೀಣ ಪ್ರದೇಶವನ್ನು ತ್ಯಜಿಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು.

ಸಾಮೂಹಿಕ ವಿವಾಹಕ್ಕೆ ಅನೇಕ ಮಂದಿ ದಾನಿಗಳು ಸೀರೆ, ಮಂಗಳಸೂತ್ರ ಹಾಗೂ ಹೂಮಾಲೆಯನ್ನು ಉದಾರವಾಗಿ ದಾನ ನೀಡಿದ್ದಾರೆ. ನಿರೀಕ್ಷೆಗಿಂತಲೂ ಮಿಗಿಲಾಗಿ ದಾನ ಹರಿದುಬರುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ನೂತನ ದಂಪತಿಗಳು ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿದರು.

RELATED ARTICLES

Latest News