ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

Social Share

ಬೆಂಗಳೂರು,ಮಾ.10- ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ರಾಜ್ಯದ 23 ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಪತ್ರ ಬರೆದಿದೆ.
ಬೆಂಗಳೂರು, ಮೈಸೂರು, ಕರ್ನಾಟಕ, ಕುವೆಂಪು, ಗುಲ್ಬರ್ಗ, ಮಂಗಳೂರು, ತುಮಕೂರು, ಕನ್ನಡ, ಅಕ್ಕಮಹಾದೇವಿ, ವಿಶ್ವೇಶ್ವರಯ್ಯ, ದಾವಣಗೆರೆ, ವಿಜಯನಗರ, ರಾಣಿಚೆನ್ನಮ್ಮ, ಸಂಸ್ಕøತ, ಗಂಗೂಬಾಯಿ ಹಾನಗಲ್, ಜಾನಪದ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಸಚಿವರಿಗೆ ಪತ್ರ ಬರೆದು ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ನಿರ್ದೇಶನ ನೀಡಲಾಗಿದೆ.
ಮಂಡ್ಯ, ಏಕೀಕೃತ ವಿವಿ, ಮಹಾರಾಣಿ ಕ್ಲಸ್ಟರ್, ನೃಪತುಂಗ, ರಾಯಚೂರು ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ಪತ್ರ ಬರೆಯಲಾಗಿದೆ. 2023ರ ಜುಲೈ 1ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‍ಡಿ ಪದವಿಯನ್ನು ಯುಜಿಸಿ ಕಡ್ಡಾಯಗೊಳಿಸಿದೆ. 2021ರ ಯುಜಿಸಿ ಅಧಿಸೂಚನೆಯಂತೆ ವಿಶ್ವವಿದ್ಯಾನಿಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅನುಮತಿ ನೀಡಲಾಗಿದೆ.
ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾರ್ಚ್ 12ರಿಂದ 16ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.  ಪದವಿ ಕಾಲೇಜಿನ ನಂತರ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.

Articles You Might Like

Share This Article