ಶಿಕ್ಷಕರ ನೇಮಕಾತಿಗಾಗಿ ವರ್ಷಕ್ಕೆ 2 ಬಾರಿ ಟಿಇಟಿ ಪರೀಕ್ಷೆ : ಸಚಿವ ನಾಗೇಶ್

Social Share

ಬೆಂಗಳೂರು,ಆ.8- ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಇದೇ ತಿಂಗಳ ಅಂತ್ಯದೊಳಗೆ ಪ್ರಕಟಿಸುವ ಗುರಿ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದು, ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗಾಗಿ ಇದೇ ಆಗಸ್ಟ್‍ನಿಂದ ಅಕ್ಟೋಬರ್‍ವರೆಗೆ ವಿಶೇಷ ಅಭಿಯಾನ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಗ್ರಂಥಾಲಯಗಳನ್ನು ಆಫ್‍ಲೈನ್ ಜೊತೆಗೆ ಆನ್‍ಲೈನ್‍ನಲ್ಲೂ ಲಭ್ಯವಿರುವಂತೆ, ಡಿಜಿಟಲೀಕರಣಗೊಳಿಸುವ ಉದ್ದೇಶವಿದೆ ಎಂದಿದ್ದಾರೆ.

ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 8,101 ಕೊಠಡಿ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 3,000 ರೂ. ಹೆಚ್ಚಳ ಮಾಡಲಾಗಿದೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿದೆ. ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆಯನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮಗಳೊಂದಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಬೇರೆ ಬೇರೆ ರಾಜ್ಯಗಳು ತರಗತಿ ಆರಂಭಿಸಲು ಹಿಂಜರಿಯುತ್ತಿದ್ದವು. ಆದರೆ ನಮ್ಮ ರಾಜ್ಯದಲ್ಲಿ ಆರಂಭದಲ್ಲೇ ಭೌತಿಕ ತರಗತಿಗಳನ್ನು ಆರಂಭಿಸಲಾಯಿತು. ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ವಿಚಾರದಲ್ಲಿ ಇಡೀ ಶಿಕ್ಷಣ ಇಲಾಖೆ ಅದರಲ್ಲೂ ಶಿಕ್ಷಕರ ಪಾತ್ರ ಅತ್ಯಂತ ಶ್ಲಾಘನೀಯ ಎಂದು ಹೇಳಿದ್ದಾರೆ.

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮತ್ತು ಸುಧಾರಣೆ ತರಲಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದೆ. 2022-23ನೇ ಸಾಲಿನಲ್ಲಿ ಪಿಯು ಕಾಲೇಜುಗಳಿಗೆ 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ.

1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ಅಭಿಯಾನ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯಲು ಶಾಲಾ ವಾಹನ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿ ಬಳಸಿಕೊಳ್ಳಲು ಅನುಮತಿಸಲಾಗಿದೆ ಎಂದು ಹೇಳಿದ್ದಾರೆ.

ಮುಂಬಡ್ತಿ ಸಂಬಂಧಿಸಿದಂತೆ ಸರ್ಕಾರಿ ಶಾಲೆಗಳ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ. ಸರ್ಕಾರಿ ಪಿಯು ಕಾಲೇಜುಗಳಿಗೆ ವಿದ್ಯಾರ್ಥಿಯನಿಯರ ದಾಖಲಾತಿ ಶುಲ್ಕ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಎಂದಿದ್ದಾರೆ.

ಕೌನ್ಸಿಲಿಂಗ್ ಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಅವರ ಸೇವಾನುಭವದ ಆಧಾರದ ಮೇಲೆ ಮುಂಬಡ್ತಿ ಬೇಡಿಕೆ ಈಡೇರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರ ಪೂರ್ವದಲ್ಲಿ ಖಾಲಿಯಾಗಿರುವ ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಾಧ್ಯವಾಗಲಿದೆ.

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ¾ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Articles You Might Like

Share This Article