Sunday, October 27, 2024
Homeರಾಜ್ಯದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

Arrangement of 2 thousand additional buses by KSRTC for Deepawali festival

ಬೆಂಗಳೂರು,ಅ.27- ದೀಪಾವಳಿ, ಕನ್ನಡ ರಾಜ್ಯೋತ್ಸವ, ವಾರಾಂತ್ಯ ಸೇರಿದಂತೆ ಸಾಲುಸಾಲಿನ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಅ.30 ರಿಂದ ನ.1 ರವರೆಗೆ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌‍ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕೆಂಪೇಗೌಡ ಬಸ್‌‍ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಹಾಗೂ ಮೈಸೂರು ರಸ್ತೆ ಬಸ್‌‍ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುವುದು.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್‌, ತ್ರಿಶೂರ್‌, ಏರ್ನಾಕುಲಂ, ಕ್ಯಾಲಿಕಟ್‌ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌‍ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್‌‍ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್‌‍ ನಿಲ್ದಾಣ/ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಪ್ರಯಾಣಿಕರು ಇ-ಟಿಕೇಟ್‌ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್‌ ಸೈಟ್‌ ಮುಖಾಂತರ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್‌ ಒಟ್ಟಿಗೆ ಕಾಯ್ದಿರಿಸಿದಾಗ ವಾಪಸ್‌‍ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳಿದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

RELATED ARTICLES

Latest News