ಬಲರಾಂಪುರ, ಏ. 19- ನೇಪಾಳದ ಪೋಖಾರಾಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ತುಳಸಿಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ 19 ಪ್ರವಾಸಿಗರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ನೇಪಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ ಅಪಘಾತವು ಬ್ರೇಕ್ ವೈಫಲ್ಯದಿಂದ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಉತ್ತರ ಪ್ರದೇಶದ ಲಕ್ನೋ, ಸೀತಾಪುರ, ಹರ್ದೋಯ್ ಮತ್ತು ಬಾರಾಬಂಕಿ ಜಿಲ್ಲೆಗಳಿಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನೇಪಾಳದ ಗಧಾವಾ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು, ಅಲ್ಲಿಂದ 19 ಜನರನ್ನು ತುಳಸಿಪುರಕ್ಕೆ ಕರೆತರಲಾಯಿತು.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 19 ಭಾರತೀಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸರ್ಕಲ್ ಆಫೀಸರ್ (ತುಳಸಿಪುರ) ಬ್ರಿಜನಂದನ್ ರಾಯ್ ಖಚಿತಪಡಿಸಿದ್ದಾರೆ.ಗಾಯ ಗೊಂಡವರಲ್ಲಿ ಕೆಲವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.