ಬೆಂಗಳೂರು,ಏ.15- ಮೊದಲ ಹಂತದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಿಕೊಳ್ಳಲು ವಿವಿಧ ರಾಜಕೀಯ ಪಕ್ಷಗಳು ಬೆವರು ಹರಿಸುತ್ತಿರುವ ಬೆನ್ನಲ್ಲೇ 2ನೇ ಹಂತದ ಚುನಾವಣೆಗೆ ಸೋಮವಾರ ಹಲವು ದಿಗ್ಗಜರು ನಾಮಪತ್ರ ಸಲ್ಲಿಸಿದ್ದಾರೆ.
ಮೇ 7ರಂದು ನಡೆಯಲಿರುವ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಪ್ರದರ್ಶಿಸುವ ಮೂಲಕ ಉಮೇದುವಾರಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(ಹಾವೇರಿ), ಜಗದೀಶ್ ಶೆಟ್ಟರ್(ಬೆಳಗಾವಿ), ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ(ಧಾರವಾಡ), ಗೀತಾ ಶಿವರಾಜ್ಕುಮಾರ್(ಶಿವಮೊಗ್ಗ), ಮೃಣಾಲ್ ಹೆಬ್ಬಾಳ್ಕರ್(ಬೆಳಗಾವಿ) ಮತ್ತಿತರ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಮೆರವಣಿಗೆ ಮೂಲಕ ಆಗಮಿಸಿ ಅನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.
ಚುನಾವಣೆಗೂ ಮುನ್ನವೇ ಭಾರೀ ಸದ್ದು ಮಾಡಿರುವ ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚಿತ್ರನಟ ಶಿವರಾಜ್ಕುಮಾರ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ಕುಮಾರ್ 2ನೇ ಬಾರಿಗೆ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಶಿವರಾಜ್ಕುಮಾರ್, ಶಾಸಕರಾದ ಗೋಪಾಲಕೃಷ್ಣ ಗೌಡರು, ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಜೊತೆಗೂಡಿ ತೆರೆದ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಗೆ ಸವ್ವಾಸೇರು ಎನ್ನುವಂತೆ ಶಕ್ತಿ ಪ್ರದರ್ಶಿಸಿದ ಕಾಂಗ್ರೆಸ್ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿತ್ತು. ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತೊಮ್ಮೆ ಸಾಂಕೇತಿಕವಾಗಿ ಉಮೇದುವಾರಿಕೆ ಮಾಡಿದರು.
ಇನ್ನು ಶಿವಮೊಗ್ಗದಂತೆ ದಿಂಗಾಲೇಶ್ವರ ಸ್ವಾಮಿ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದಿರುವ ಧಾರವಾಡದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಾಮಪತ್ರ ಸಲ್ಲಿಸಿದರು. ಜೋಷಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಅರವಿಂದ್ ಬೆಲ್ಲದ್ ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸಿದ್ದರು.
ಕಾಂಗ್ರೆಸ್ ಹಾಗೂ ದಿಂಗಾಲೇಶ್ವರ ಸ್ವಾಮೀಜಿಗೆ ತಿರುಗೇಟು ನೀಡುವಂತೆ ಬಿಜೆಪಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ಜೋಷಿ ಅವರು ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಕೆ ಮಾಡಿದರು. ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಬೆಳಗಾವಿಯಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಸುವ ವೇಳೆ ಭಾಗಿಯಾಗಿದ್ದರು. ಬೆಳಗಾವಿಯ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಅಪಾರ ಬೆಂಬಲಿಗರ ನಡುವೆ ಇಂದು ಜಿಲ್ಲಾಕಾರಿಗೆ ನಾಮಪತ್ರ ಸಲ್ಲಿಸಿದರು. ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಹನಮಂತ ನಿರಾಣಿ, ಮಾಜಿ ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲೆಯ ಮತ್ತೊಂದು ಕ್ಷೇತ್ರವಾದ ಚಿಕ್ಕೋಡಿಯಲ್ಲಿ 2ನೇ ಬಾರಿಗೆ ಅದೃಷ್ಟ ಪರೀಕ್ಷಿಸಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಸೀಮಿತ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಮಾಡಿದ್ದಾರೆ. ಹಾವೇರಿಯಿಂದ ಮೊದಲ ಬಾರಿಗೆ ಅದೃಷ್ಟ ಪಣಕ್ಕಿಟ್ಟಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಮೇದುವಾರಿಕೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಬಿ.ಸಿ.ಪಾಟೀಲ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಉಮೇದುವಾರಿಕೆ ಮಾಡಿದ್ದಾರೆ. ಸೋಮವಾರ ಕೆಲವು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಭಾರೀ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮತ್ತೊಂದು ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಲಿದೆ.
2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದ್ದು, ಶುಭ ಮುಹೂರ್ತ, ಶುಭ ಗಳಿಗೆ ನೋಡಿಕೊಂಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಿಜಾಪುರ, ಬೀದರ್, ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ.