ಮೈಹಾರ್, ಫೆ 19- ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮತ್ತು ಅವರ ಮಗಳು ಸಾವನ್ನಪ್ಪಿದ್ದಾರೆ ಮತ್ತು ಕುಟುಂಬ ಇಬ್ಬರು ಸದಸ್ಯರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ 1.30 ರ ಸುಮಾರಿಗೆ ಕುಟುಂಬವು ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿರುವ ಮಹಾಕುಂಭದಿಂದ ಮುಂಬೈನಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ತಡ ರಾತ್ರಿ ಅಪಘಾತ ಸಂಭವಿಸಿದೆ ಎಂದು ಮೈಹರ್ ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅನಿಮೇಶ್ ದ್ವಿವೇದಿ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-30ರ ನರೋರಾ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಸುನೀಲ್ ಕುಮಾರ್ ಉಪಾಧ್ಯಾಯ (62), ಅವರ ಪತ್ನಿ ಸರೋಜಿತಾ ಉಪಾಧ್ಯಾಯ (56) ಮತ್ತು ಅವರ ಪುತ್ರಿ ಸ್ನೇಹಾ ಉಪಾಧ್ಯಾಯ (28) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಪಾಧ್ಯಾಯ ಅವರ ಕುಟುಂಬದ ಇತರ ಇಬ್ಬರು ಸದಸ್ಯರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.