35 ಸಾವಿರಕ್ಕೂ ಹೆಚ್ಚು ಅಕ್ರಮ ಮತದಾರರನ್ನು ಸೇರ್ಪಡೆ : ಸೊಗಡು ಶಿವಣ್ಣ ಆರೋಪ
ತುಮಕೂರು,ಮಾ.9-ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರಕ್ಕೂ ಹೆಚ್ಚು ಅಕ್ರಮ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಮಾಹಿತಿ ಹಕ್ಕುದಾರ ಪಂಚಾಕ್ಷರಯ್ಯ , ಈ ಸಂಬಂಧ ಮುಂದಿನವಾರ ರಾಜ್ಯ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಜಂಟಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಚುನಾವಣಾ ಆಯೋಗ ಈ ಹಿಂದೆ ಜಿಲ್ಲಾ ಚುನಾವಣಾ ಆಯೋಗಕ್ಕೆ ಅಧಿಕಾರಿಗಳು ಸಲ್ಲಿಸಿದ್ದ ವರದಿ ತಿರಸ್ಕರಿಸಿ ಮರುವರದಿ ಸಲ್ಲಿಸಲು ಸೂಚಿಸಿತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. 2014 -2017ರ ಅವಧಿಯಲ್ಲಿ ಒಟ್ಟು 35 ಸಾವಿರಕ್ಕೂ ಹೆಚ್ಚು ಮತದಾರರ ಸೇರ್ಪಡೆಯಾಗಿದೆ. ಇವುಗಳನ್ನು ಪರಿಶೀಲನೆ ಮಾಡಲು ರಾಜ್ಯ ಚುನಾವಣಾ ಆಯೋಗ ಸೂಚಿಸಿದ್ದು , ಪರಿಶೀಲನೆ ವೇಳೆ ಅರ್ಜಿಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ತುಮಕೂರು ಜಿಲ್ಲಾ ಚುನಾವಣಾಧಿಕಾರಿಗಳ ಬೇಜವಾಬ್ದಾರಿ ವರ್ತನೆಯ ಬಗ್ಗೆ ಮುಂದಿನ ವಾರ ರಾಜ್ಯ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ತಕ್ಷಣ ಅಕ್ರಮ ಮತದಾರರ ಸೇರ್ಪಡೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಂದೀಶ್, ಮಹೇಶ್ ಮತ್ತಿತರರು ಇದ್ದರು.