ಬೆಂಗಳೂರು, ಸೆ.1- ರಾಜ್ಯದಲ್ಲಿ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ತಗ್ಗಿದ್ದರೂ ಮಳೆ ಮಾತ್ರ ನಿಂತಿಲ್ಲ. ನಿನ್ನೆ ಕೂಡ ರಾಜ್ಯದ ಕೆಲೆವೆಡೆ ಭಾರೀ ಮಳೆಯಾಗಿದೆ. ಭಟ್ಕಳದಲ್ಲಿ 168.5 ಮಿ.ಮೀ ಭಾರೀ ಮಳೆಯಾದ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಹೆಚ್ಚಿನ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೋಲಾರ, ಹೊಸಕೋಟೆ, ದೊಡ್ಡಬಳ್ಳಾಪುರದಲ್ಲೂ ಹೆಚ್ಚು ಮಳೆಯಾಗಿದೆ. ಹೊಸಕೋಟೆಯ ದೊಡ್ಡಕೆರೆ ಕೋಡಿ ಬಿದ್ದಿದ್ದು, ಕೆಎಚ್‍ಬಿ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ. ಕೋಲಾರದಲ್ಲೂ ಕೆರೆಗಳು ಕೋಡಿ ಬಿದ್ದಿವೆ.
ಅತಿವೃಷ್ಟಿ, ಪ್ರವಾಹಕ್ಕೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.ವಿಜಯಪುರದ ಬಾಗೇವಾಡಿ, ದಾವಣಗೆರೆಯ ಚನ್ನಗಿರಿ, ಬೆಳಗಾವಿ ಜಿಲ್ಲೆಯ ಗೋಕಾಕ, ಸವದತ್ತಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಲಬುರಗಿ, ಯಾದಗಿರಿ, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೀರ್ದ ಜಿಲ್ಲೆಗಳಲ್ಲಿ ಭಾಗಶಃ ಉತ್ತಮ ಮಳೆಯಾಗಿದೆ. ಉಳಿದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತರಿಂದ ಅಹವಾಲು ಸ್ವೀಕರಿಸಿದರು.
ರಾಮನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನಗರದಲ್ಲಿ ಮಳೆ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸಂಜೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.
ಬೆಂಗಳೂರು ನಗರದ ಮಹದೇವಪುರ ವಲಯದಲ್ಲಿ 9 ಕಡೆ ಹಾಗೂ ಬೊಮ್ಮನಹಳ್ಳಿಯಲ್ಲಿ 11 ಕಡೆ ತೊಂದರೆಯಾಗಿದೆ. ಮುಖ್ಯಮಂತ್ರಿಗಳು ಸ್ಥಳದಲ್ಲೇ ಪರಿಹಾರ ಕ್ರಮಗಳಿಗೆ ಸೂಚನೆ ನೀಡುವ ಸಾಧ್ಯತೆಗಳಿವೆ.
ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಒಂದು ವಾರ ಕಾಲ ಮಳೆ ಮುಂದುವರೆಯಲಿದೆ.
ಅದರಲ್ಲೂ ದಕ್ಷಿಣ ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ತಮಿಳುನಾಡು ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು-ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.