ಶಿವಮೊಗ್ಗ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಬೆಂಗಳೂರು, ಜ.22- ಶಿವಮೊಗ್ಗ ಜಿಲ್ಲೆ ಹುಣಸೋಡು ಬಳಿ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಸಾವನ್ನಪ್ಪಿರುವವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ಕೂಡಲೇ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚಿಸಲಾಗಿದೆ.ಗಾಯಾಳುಗಳಿಗೂ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಘಟನಾ ಸ್ಥಳದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ , ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತಿತರರು ಇದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಹೇಳಿದರು. ಘಟನಾ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ, ಸ್ಥಳೀಯ ಪೊಲೀಸರು ಮತ್ತಿತರರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಿರುವ ಮಾಹಿತಿಯಂತೆ ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ ಸುಧಾಕರ್ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದ್ದೇವೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರು ಕಳಿಸದಂತೆ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಿದೆ.

ರಾಜ್ಯದ ನಾಲ್ಕಾರು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗುವುದು. ಎಲ್ಲೆಲ್ಲಿ ಕಾನೂನು ಬಾಹಿರ ಗಣಿಗಾರಿಕೆ ನಡೆಯುತ್ತಿದೆಯೋ ಅಂತಹ ಕಡೆ ಸಂಪೂರ್ಣವಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ತಿಳಿಸಿದರು.