ಬೆಂಗಳೂರು, ಮೇ1-ಬೇಸಿಗೆ ಮಳೆ ರಾಜ್ಯದಲ್ಲಿ ಚೇತರಿಕೆ ಕಂಡಿದ್ದು, ಐದು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಪರಿಣಾಮ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಅಲ್ಲಲ್ಲಿ ಮಳೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಚದುರಿದಂತೆ ಮಳೆಯಾಗಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಿದೆ ಎಂದು ಅವರು ಹೇಳಿದ್ದಾರೆ.
ಹಿರಿಯೂರು, ಚಿತ್ರದುರ್ಗದಲ್ಲಿ 5 ಸೆ.ಮೀ., ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ 3 ಸೆ.ಮೀ., ಬೆಳ್ತಂಗಡಿಯಲ್ಲಿ 2 ಸೆ.ಮೀ.ನಷ್ಟು ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಐದು ದಿನಗಳ ಕಾಲ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅವರು ಸಲಹೆ ಮಾಡಿದ್ದಾರೆ.
ಕಲಬುರಗಿಯಲ್ಲಿ 42 ಡಿ.ಸೆಂ., ಬೀದರ್‌ನಲ್ಲಿ 41 ಡಿ.ಸೆಂ., ಬೆಂಗಳೂರಿನಲ್ಲಿ 34 ಡಿ.ಸೆಂ., ಧಾರವಾಡದಲ್ಲಿ 37 ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ 34ರಿಂದ 36 ಡಿ.ಸೆಂ., ಕಲ್ಯಾಣ ಕರ್ನಾಟಕ ಭಾಗದಲ್ಲಿ 40ರಿಂದ 42 ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.