ಲಖನೌ,ಸೆ.8- ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸ್ಥಳದಲ್ಲಿ ಇನ್ನೂ ಐವರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಟ್ಟಡದ ಬಳಿ ನಿಂತಿದ್ದ ಟ್ರಕ್‌ಗೂ ಹಾನಿಯಾಗಿದೆ. ಕಟ್ಟಡ ಕುಸಿದು ಬಿದ್ದಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿತ್ತು. ಸದ್ಯ ಪೊಲೀಸ್ ತಂಡ ಹಾಗೂ ಇತರೆ ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು ಕಟ್ಟಡದ ಅವಶೇಷಗಳನ್ನು ತೆಗೆಯುವಲ್ಲಿ ನಿರತರಾಗಿದ್ದಾರೆ.
ಮುಖ್ಯಮಂತ್ರಿಗಳು ಸ್ಥಳದ ಪರಿಸ್ಥಿತಿ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ಎಡಿಜಿ ಅಮಿತಾಬ್ ಯಶ್ ಅವರು ಮಾಹಿತಿ ನೀಡಿದ್ದಾರೆ.
ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.