ಠಾಣೆ, ಮೇ 22 (ಪಿಟಿಐ): ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದ ಪರಿಣಾಮ ಇಬ್ಬರು ಸಹೋದರರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ರ ಸುಮಾರಿಗೆ ಕೈಲಾಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಉಲ್ಲಾಸನಗರ ಪೊಲೀಸ್ ನಿಯಂತ್ರಣ ಕೊಠಡಿ ನೀಡಿದ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಸುಮಾರು 15 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಹಿಲ್ ಲೈನ್ ಪೊಲೀಸ್ ಠಾಣೆಯ ತಂಡ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ. ಸಂಪೂರ್ಣ ಪ್ರದೇಶವನ್ನು ಸುತ್ತುವರಿದು ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two brothers shot dead in Ulhasnagar
