ಬೆಂಗಳೂರು,ಜ.8- ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯತೆ ಕಾಪಾಡುವುದು, ಚುನಾವಣೆ ಸಿದ್ದತೆ, ಕ್ಷೇತ್ರ ಹಂಚಿಕೆ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರ ಅಭಿಪ್ರಾಯವನ್ನು ಕುರಿತು ಚುನಾವಣೆ ಕುರಿತಂತೆ ಸಮಾಲೋಚನೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಎಲ್ಲೆಲ್ಲಿ ಜೆಡಿಎಸ್ ಪ್ರಾಬಲ್ಯವಿದೆಯೋ ಅಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ, ಈಗಲೇ ಚುನಾವಣಾ ತಯಾರಿ ನಡೆಸುವುದು, ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ಸೂಚಿಸುವುದು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ
ಸಭೆಯಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಲೀಲಾದೇವಿ ಆರ್.ಪ್ರಸಾದ್, ಬಂಡೆಪ್ಪ ಕಾಶಂಪೂರ್, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಕರೆಮ್ಮ, ಶಾರದಾ ಪೂರ್ಯಾ ನಾಯಕ್, ತಿಪ್ಪೇಸ್ವಾಮಿ, ನೇಮಿರಾಜ ನಾಯಕ್, ಎ.ಮಂಜು, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ರಮೇಶ್ ಗೌಡ, ತಿಮ್ಮರಾಯಪ್ಪ ಹಾಗೂ ವಿವಿಧ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು.
ಸಭೆಗೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಚುನಾವಣೆ ಪೂರ್ವ ತಯಾರಿ ಕುರಿತಂತೆ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆ ಕರೆದು ಚರ್ಚಿಸಲಾಗುತ್ತಿದೆ ಎಂದು ಹೇಳಿದರು.