ಬೆಂಗಳೂರು, ಮೇ 29- ನೂತನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ನಾಳೆ ಬೆಂಗಳೂರಿನ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.
ದೆಹಲಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಪರಸ್ಪರ ಚರ್ಚೆ ನಡೆಸಿದ್ದು, ಶಾಸಕಾಂಗ ಸಭೆಯ ಸಮಯ ಮತ್ತು ದಿನಾಂಕವನ್ನು ನಿರ್ಧರಿಸಿದ್ದಾರೆ.
ನಾಳೆ ಮಧ್ಯಾಹ್ನ 4 ಗಂಟೆಗೆ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ಶಾಸಕಾಂಗ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಕಾರ್ಯಾದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್.ಬೋಸ್‌ರಾಜ್, ಕೆಪಿಸಿಸಿಯ ಎಲ್ಲಾ ಕಾರ್ಯಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಭೆಗೆ ಹಾಜರಾಗುವಂತೆ ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ಹಾಗೂ ರಾಜ್ಯಸಭೆ ಸದಸ್ಯರು ಮತ್ತು ಬಾಹ್ಯ ಬೆಂಬಲಿತ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಈ ಸಭೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಪಾತ್ರವಹಿಸಲಿದೆ. ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಬಣದ ಶಾಸಕರು ನಾನಾ ರೀತಿಯ ಪ್ರಶ್ನೆಗಳನ್ನು ಕೇಳಲು ತಯಾರಿ ನಡೆಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಯಾವ ಕಾರಣಕ್ಕಾಗಿ ಪದಚ್ಯುತಿಗೊಳಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಎಂದು ತಿಳಿಸುವಂತೆ ಒತ್ತಾಯಿಸುವ ಸಾಧ್ಯತೆ ಇದೆ.
ನಾಲ್ಕು ಉಪಮುಖ್ಯಮಂತ್ರಿಗಳ ಹುದ್ದೆ, ಸಂಪುಟ ಪುನರ್ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲಾ ವಿಚಾರಗಳು ಮುಕ್ತವಾಗಿ ಚರ್ಚೆಯಾಗಬೇಕು. ಈ ಹಿಂದೆ ಅಧಿಕಾರ ಹಂಚಿಕೆ ಬಗ್ಗೆ ನಡೆದಿದ್ದ ಗೌಪ್ಯ ಚರ್ಚೆಯ ಬಗ್ಗೆ ಸ್ಪಷ್ಟನೆ ನೀಡಲು ಹೈಕಮಾಂಡ್ 6 ತಿಂಗಳ ಸಮಯ ತೆಗೆದುಕೊಂಡಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಸಾಕಷ್ಟು ಗೊಂದಲಗಳಾಗಿ ಪಕ್ಷಕ್ಕೆ ಹಾನಿಯಾಗಿದೆ.
ಯಾವುದೇ ವಿಚಾರಗಳಿದ್ದರೂ ಪಕ್ಷ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಲು ಕೆಲ ಶಾಸಕರು ತಯಾರಿ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಮತ್ತು ಜಾತಿವಾರು ಸಚಿವ ಸ್ಥಾನಕ್ಕಾಗಿ ಸಭೆಯಲ್ಲಿ ಒತ್ತಡ ಹೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
