ಬೆಂಗಳೂರು, ಜೂ. 3- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮತ್ತೊಮೆ ಪರಸ್ಪರ ಆಲಿಂಗನದ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ದೆಹಲಿಯಲ್ಲಿ ಕಳೆದ ಎರಡು ದಿನಗಳ ನಂತರ ಗಂಭೀರ ಚರ್ಚೆಯ ಬಳಿಕ ಸಚಿವ ಸಂಪುಟ ಸೇರುವವರ ಪಟ್ಟಿಗೆ ಹೈಕಮಾಂಡ್ ಅಂಗೀಕಾರ ನೀಡಿದೆ. ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿಯಾಗಲಿರುವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರನ್ನು ಇಬ್ಬರೂ ನಾಯಕರು ಆಹ್ವಾನಿಸಿದ್ದಾರೆ. ತಮ ಮನೆಗೆ ಬಂದ ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಹಾರೈಸಿರುವ ಸಿದ್ದಾರಾಮಯ್ಯ ಆಲಂಗಿಸಿ, ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಸನಾನಿಸುವ ಮೂಲಕ ತಮ ಪರವಾಗಿ ವಕಾಲತ್ತು ವಹಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.ಇದೇ ವೇಳೆ ಎಲ್ಲರ ಮುಖದಲ್ಲೂ ನಗುವಿನ ಭಾವ ಉಕ್ಕಿ ಹರಿಯುತ್ತಿತ್ತು. ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಟ್ಟ ಸಿದ್ದರಾಮಯ್ಯ ಅವರು ಸಂತೋಷದಿಂದಲೇ ಎಂದಿನಂತೆ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಅವರನ್ನು ಅಭಿನಂದಿಸಿದ್ದಾರೆ. ಈ ವೇಳೆ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಪುತ್ರರೂ ಆಗಿರುವ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು. ಯತೀಂದ್ರ ಅವರು ಕೂಡಾ ಸಚಿವ ಸಂಪುಟ ಸೇರಲಿದ್ದಾರೆ.
ಇತ್ತೀಚೆಗೆ ಸಂಪುಟ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆ ಸಭೆಯ ಆರಂಭದಲ್ಲಿ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದು ಆಲಿಂಗನದ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.ಇಂದು ಎರಡನೇ ಬಾರಿಗೆ ಇಬ್ಬರೂ ನಾಯಕರು ಪರಸ್ಪರ ತಬ್ಬಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
