ಬೆಂಗಳೂರು, ಜ.16- ರಾಜ್ಯದಲ್ಲಿ ಅಪರಾಧ ಚಟುವಟಿಕೆ ಗಳನ್ನು ಮಟ್ಟ ಹಾಕಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದ ಪೋಲೀಸ್ ಮಹಾನಿರ್ದೇಶಕರ ಕಚೇರಿಯ ಲ್ಲಿಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದರು.
ಸಂಚಾರ, ಕಾನೂನು ಸುವ್ಯವಸ್ಥೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಇಂದು ಸುದೀರ್ಘವಾಗಿ ಮಾತನಾಡಿದ ಅವರು, ಕಾನೂನು ಉಲ್ಲಂಘಿಸುವವರು ಯಾರೇ ಆದರೂ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಹಾವೇರಿ, ಬೆಳಗಾವಿಯಲ್ಲಿ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ ಬೀಟ್‍ಗಳನ್ನು ಹೆಚ್ಚಿಸಬೇಕು. ಕಿರಿಯ ಅಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜನಸ್ನೇಹಿ ಪೊಲೀಸ್ ಠಾಣೆಗಳಾಗಬೇಕು ಎಂದು ಸಲಹೆ ನೀಡಿದರು.
ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ನಡೆಯುತ್ತಿರುವುದರಿಂದ ಕಟ್ಟೆಚ್ಚರ ವಹಿಸುವ ಅಗತ್ಯವಿದೆ. ಪರಿಸ್ಥಿತಿಯ ಲಾಭ ಪಡೆದು ಕೆಲವರು ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಯಿರುವುದರಿಂದ ಈಗಿನಿಂದಲೇ ಸಜ್ಜಾಗಿ ಎಂದು ಹೇಳಿದರು. ಲೋಕಸಭೆ ಚುನಾವಣೆ ಕೂಡ ಹತ್ತಿರದಲ್ಲಿದ್ದು, ಭದ್ರತೆ ನೀಡುವ ಜವಾಬ್ದಾರಿ ನಿಮ್ಮ ಮೇಲಿದೆ. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿ ಶಾಂತಿಗೆ ಭಂಗ ಮಾಡುವ ಪ್ರಯತ್ನಗಳು ನಡೆಯಬಹುದು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುತುವರ್ಜಿ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ
ಸೈಬರ್ ಅಪರಾಧಗಳು ಕೂಡ ಮಿತಿಮೀರುತ್ತಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಕ್ರಿಯೆ ಹೆಚ್ಚಬೇಕು. ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದು ಇನ್ನಷ್ಟು ಹೆಚ್ಚಾಗಬೇಕು ಎಂದು ಹೇಳಿದರು.
ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡು ಸೈಬರ್ ಅಪರಾಧಗಳನ್ನು ಆದಷ್ಟು ಮಟ್ಟ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಗ್ನಲ್‍ಗಳನ್ನು ಸ್ಥಾಪಿಸಲಾಗುತ್ತಿದೆ. ಆಯಾ ಠಾಣೆಗಳ ಇನ್ಸ್‍ಪೆಕ್ಟರ್‍ಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಿ ಸಮಸ್ಯೆ ಬಗೆಹರಿಸಲು ಒಟ್ಟಾಗಿ ಪ್ರಯತ್ನಿಸಬೇಕು. ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ಇನ್ನಷ್ಟು ಕಾರ್ಯತತ್ಪರರಾಗಿ ಕೆಲಸ ಮಾಡಬೇಕಿದೆ. ಇಂತಹ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.
ಸದ್ಯದಲ್ಲೇ ಸಬ್ ಇನ್ಸ್‍ಪೆಕ್ಟರ್ ಹಾಗೂ ಕಾನ್ಸ್‍ಟೆಬಲ್‍ಗಳ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಎಲ್ಲಿಯೂ ಕೂಡ ಅಕ್ರಮಕ್ಕೆ ಎಡೆಮಾಡಿಕೊಡದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಿಎಂ ತಿಳಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೇರಿದಂತೆ ಎಲ್ಲ ಡಿಜಿಪಿಗಳು, ಎಡಿಜಿಪಿಗಳು ಐಜಿಪಿಗಳು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.