ಬೆಂಗಳೂರು, ಜೂ.7- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಹಾಗೂ ವಿಧಾನ ಪರಿಷತ್ನ 7 ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಇಂದು ಸಂಜೆ ವೇಳೆಗೆ ಎನ್ಡಿಎ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸುವ ಸಾಧ್ಯತೆಗಳಿವೆ.
ವಿದೇಶ ಪ್ರವಾಸದಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ವಾಪಸ್ಸಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಮುಖದಲ್ಲಿ ಶಾಸಕರ ಸಭೆ ನಡೆಸಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ. ಅನಂತರ ಬಿಜೆಪಿ ನಾಯಕರೊಂದಿಗೆ ಸಮಾಲೋಚಿಸಿ ಎನ್ಡಿಎ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡಬೇಕು ಎಂಬ ಒತ್ತಾಸೆ, ಅವರ ಅಭಿಮಾನಿಗಳು ಹಾಗೂ ಜೆಡಿಎಸ್ ಮುಖಂಡರಲ್ಲಿದೆ. ಈ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಬಿಜೆಪಿ ನಾಯಕರು ಸಮತಿಸಿದರೆ, ಎನ್ಡಿಎ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ದೇವೇಗೌಡರು ಸ್ಪರ್ಧಿಸಲಿದ್ದಾರೆ.
ಬಿಜೆಪಿ ನಾಯಕರು ಸಹ ಜೆಡಿಎಸ್ ಪ್ರಸ್ತಾವಕ್ಕೆ ಸಮತಿಸುವ ಸಾಧ್ಯತೆಗಳಿದ್ದು, ದೇವೇಗೌಡರು ಎನ್ಡಿಎ ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸು ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ನಿರಾಕರಿಸಿದರೆ ಬಿಜೆಪಿ ಅಧಿಕೃತ ಅಭ್ಯರ್ಥಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಂಸದರಾದ ಸುಮಲತಾ ಅಂಬರೀಶ್ ಸೇರಿದಂತೆ ಹಲವರ ಹೆಸರುಗಳು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿವೆ. ಬಿಜೆಪಿ ನಾಯಕರು ಯಾರನ್ನು ಸ್ಪರ್ಧೆಗಿಳಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮಾಜಿ ವಿಧಾನ ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬಿ.ಎಂ.ಫಾರೂಕ್ ಸೇರಿದಂತೆ ಕೆಲವರು ಆಸಕ್ತಿ ತೋರಿದ್ದಾರೆ. ಇವರಿಬ್ಬರಲ್ಲಿ ಒಬ್ಬರನ್ನು ಮೇಲನೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ.
ಗೆಲ್ಲುವಷ್ಟು ಶಾಸಕರ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಬಿಜೆಪಿಯ ಹೆಚ್ಚುವರಿ ಮತಗಳ ನಿರೀಕ್ಷೆಯೊಂದಿಗೆ ಬಿ.ಎಂ.ಫಾರೂಕ್ ಅವರನ್ನು ಸ್ಪರ್ಧೆಗಿಳಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ದೇವೇಗೌಡರಿಗೆ ಅವಕಾಶ ಮಾಡಿಕೊಟ್ಟರೆ, ಮೇಲನೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಜೆಡಿಎಸ್ ಅಭ್ಯರ್ಥಿ ಹಾಕದಿರುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ.ಒಟ್ಟಾರೆ ಇಂದು ಸಂಜೆ ವೇಳೆಗೆ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
