ಬೆಂಗಳೂರು, ಜೂ.8- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.ಕಾಂಗ್ರೆಸ್ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ.ಎಂ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಗೆಲ್ಲಲು ಸಾಧ್ಯವಾಗುವಷ್ಟು ಶಾಸಕರ ಸಂಖ್ಯಾಬಲ ಇಲ್ಲದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್ ಇರುವುದರಿಂದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಲಿದೆ.
ರಾಜ್ಯಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೊಡಗಿನ ಬೋಜಣ್ಣ ಸೋಮಯ್ಯ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಇವರ ನಾಮಪತ್ರಕ್ಕೆ ಸೂಚಕರ ಸಹಿ ಇಲ್ಲದಿರುವ ಹಿನ್ನೆಲೆಯಲ್ಲಿ ಬಹುತೇಕ ತಿರಸ್ಕೃತವಾಗಲಿದೆ. ಹೀಗಾಗಿ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿಯುವ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆದು ಸಿಂಧುವಾದ ನಾಮಪತ್ರಗಳನ್ನು ನಾಳೆ ಸಂಜೆ ಪ್ರಕಟಿಸಲಾಗುತ್ತದೆ. ಉಮೇದುವಾರಿಕೆ ವಾಪಸ್ ಪಡೆಯಲು ಜೂ.11ರವರೆಗೆ ಅವಕಾಶವಿದೆ.ಅಂದು ಮಧ್ಯಾಹ್ನ 3 ಗಂಟೆಯ ನಂತರ ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಚುನಾವಣಾ ಕಣಾದಲ್ಲಿ ಕಾಂಗ್ರೆಸ್‌ನ ಮೂವರು, ಬಿಜೆಪಿಯ ಒಬ್ಬ ಉಳಿಯುವುದರಿಂದ ಚುನಾವಣಾ ಕಾರಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಬಿಜೆಪಿ ಅಭ್ಯರ್ಥಿ ಪ್ರೊ .ಎಂ.ನಾಗರಾಜ ಅವರು ಇಂದು ತಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ, ಈರಣ್ಣ ಕಡಾಡಿ, ನಾರಾಯಣ ಕೊರಗಪ್ಪ ಅವರು ರಾಜ್ಯಸಭೆ ಸದಸ್ಯ ಸ್ಥಾನದಿಂದ ಜೂ.25ರಂದು ನಿವೃತ್ತಿಯಾಗಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ.
