ಬೆಂಗಳೂರು,ಜೂ.8-ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರಕನ್ನಡ, ಹಾವೇರಿ, ಧಾರವಾಡ, ರಾಯಚೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ , ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಬಲವಾದ ಮೇಲೈ ಗಾಳಿ ಬೀಸಲಿದೆ. ಜೊತೆಗೆ ಆಗಾಗ್ಗೆ ಮಳೆಯೂ ಬೀಳಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದರೆ ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಧಾರಾಕಾರ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.
ನಿನ್ನೆಯೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕುಂದಾಪುರದಲ್ಲಿ 75 ಮಿ.ಮೀನಷ್ಟು ಅತ್ಯ ಕ ಪ್ರಮಾಣದ ಮಳೆಯಾಗಿದೆ. ಯಲ್ಲಾಪುರ 72.2 ಮಿ.ಮೀ, ಸಿರ್ಸಿ 63, ಹೊನ್ನಾವರ 62.5, ಕುಮಟಾ 55.4, ಗೋಕರ್ಣ 54.3, ಕಾರಟಗಿ 82.6, ಕಿತ್ತೂರು 80, ಲೋಕಾಪುರ್ 78, ಹುಕ್ಕೇರಿ 61.1, ತಾವರಗೆರೆ 61 ಮಿ.ಮೀ ಉಳಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲೂ ನಿನ್ನೆ ಸಂಜೆ ಹಾಗೂ ರಾತ್ರಿ ಮಳೆಯಾಗಿದೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಬಿತ್ತನೆಗೆ ರೈತರು ಜಮೀನು ಸಿದ್ಧತೆ ಮಾಡುವುದರಲ್ಲಿ ತೊಡಗಿದ್ದಾರೆ.
