ನವದೆಹಲಿ, ಜೂ.10- ಖಾತೆ ಹಂಚಿಕೆ ಅಸಮಾಧಾನ ಬಗೆಹರಿಸುವುದು ಹಾಗೂ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ರವರು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಹೈಕಮಾಂಡ್ ಭೇಟಿಗಾಗಿ ಡಿಕೆಶಿ ದೆಹಲಿಗೆ ಆಗಮಿಸಿದ್ದಾರೆ. ಹೈಕಮಾಂಡ್ ನಾಯಕರಿಗೆ ಡಿಕೆಶಿ ತಮನ್ನು ಮುಖ್ಯಮಂತ್ರಿ ಮಾಡಿದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಎಐಸಿಸಿ ಕಚೇರಿಗೆ ಭೇಟಿ ನೀಡಿದರು. ಬಳಿಕ ಎನ್ಎಸ್ಯುಐ ಕಚೇರಿ, ಯುವ ಕಾಂಗ್ರೆಸ್ ಕಚೇರಿ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿದರು.
ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಕೆಲವು ಸಚಿವರು ಹಂಚಿಕೆ ಮಾಡಿರುವ ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜಲಸಂಪನೂಲ ಸಚಿವ ರಾಮಲಿಂಗಾರೆಡ್ಡಿ ಅವರ ಖಾತೆ ಅಸಮಾಧಾನಕ್ಕೆ ತೆರೆ ಬಿದ್ದ ನಂತರವೂ ಕೆಲವು ಸಚಿವರು ಖಾತೆ ಹಂಚಿಕೆ ಕುರಿತಂತೆ ತಮ ಬೇಸರ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಕೃಷ್ಣಭೈರೇಗೌಡ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ನೀಡಿರುವ ಖಾತೆ ಬಗ್ಗೆ ಹೈಕಮಾಂಡ್ ನಾಯಕರ ಮುಂದೆ ಅಸಮಾಧಾನ ತೋಡಿಕೊಂಡಿದ್ದು, ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದರ ಬೆನ್ನಲ್ಲೇ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಖಾತೆ ಹಂಚಿಕೆಯ ಗೊಂದಲ ಬಗೆಹರಿಸುವುದು ಹಾಗೂ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳನ್ನು ಯಾರ್ಯಾರಿಗೆ ನೀಡಬೇಕು ಎಂಬ ಪ್ರಾಥಮಿಕ ಚರ್ಚೆ ನಡೆಸಿದ್ದಾರೆ.
ಹಿರಿಯ ಶಾಸಕರು, ಮಾಜಿ ಸಚಿವರು ಹಾಗೂ ಮೊದಲ ಬಾರಿಗೆ ಆಯ್ಕೆಯಾಗಿರುವ ಶಾಸಕರೂ ಕೂಡಾ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವ ಸ್ಥಾನಕ್ಕಾಗಿ ವರಿಷ್ಠರ ಮೇಲೆ ಒತ್ತಡ, ಶಿಫಾರಸು ಮಾಡತೊಡಗಿದ್ದಾರೆ.
ಸಚಿವಾಕಾಂಕ್ಷಿ ಶಾಸಕರು ದೆಹಲಿಗೆ ಆಗಮಿಸಿದ್ದು, ಹೈಕಮಾಂಡ್ ನಾಯಕರ ಮನವೊಲಿಕೆ ಹಾಗೂ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆ ಜೂ.18 ರಂದು ಪೂರ್ಣಗೊಳ್ಳಲಿದ್ದು, ಆನಂತರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡುವ ಬಗ್ಗೆಯೂ ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದ್ದಾರೆ.
ಸಚಿವರಾಗಲು ಶಾಸಕರಿಂದ ನಿರಂತರ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಜೂನ್ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಆಸಕ್ತಿ ತೋರಿದ್ದಾರೆ. ಬಾಕಿ ಉಳಿದಿರುವ ಎಲ್ಲಾ 20 ಸಚಿವ ಸ್ಥಾನಗಳನ್ನು ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭರ್ತಿ ಮಾಡುವ ಬಗ್ಗೆಯೂ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಜಾತಿವಾರು, ಪ್ರಾದೇಶಿಕತೆ, ಹಿರಿತನ ಮೊದಲಾದ ಮಾನದಂಡಗಳನ್ನು ಮುಂದಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದ ಹಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಹೆಚ್ಚು ಆದ್ಯತೆ ನೀಡುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಿದ್ದಾರೆ.
ಸಂಪುಟ ವಿಸ್ತರಣೆ ಕುರಿತಂತೆ ಪ್ರಾಥಮಿಕ ಚರ್ಚೆ ನಡೆಸಲಾಗಿದ್ದು, ಮತ್ತೊಂದು ಸುತ್ತಿನ ಸಭೆಯ ನಂತರ ಸಂಪುಟ ಸೇರ್ಪಡೆಯಾಗುವ ಶಾಸಕರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಈಗಾಗಲೇ ಉಂಟಾಗಿರುವ ಅಸಮಾಧಾನ, ಖಾತೆ ಹಂಚಿಕೆ ಗೊಂದಲ ಮತ್ತೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಲೆದೋರುವ ಸಾಧ್ಯತೆಯಿದ್ದು, ಅದಕ್ಕೆ ಅವಕಾಶ ದೊರೆಯದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಲು ಹೈಕಮಾಂಡ್ ಮುಖ್ಯಮಂತ್ರಿಗೆ ಸಲಹೆ ಮಾಡಿದೆ ಎಂದು ತಿಳಿದುಬಂದಿದೆ.
ಇಂದು ರಾತ್ರಿ ಹಿರಿಯ ಐಎಎಸ್ ಅಧಿಕಾರಿಗಳ ಜೊತೆ ಔತಣಕೂಟದಲ್ಲಿ ಮುಖ್ಯಮಂತ್ರಿ ಭಾಗಿಯಾಗಲಿದ್ದಾರೆ. ರಾತ್ರಿ ದೆಹಲಿಯಲ್ಲೇ ಉಳಿಯಲಿರುವ ಶಿವಕುಮಾರ್ ನಾಳೆ ಬೆಳಿಗ್ಗೆ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಬೇಡಿಕೆಯನ್ನು ಮಂಡಿಸಲಿದ್ದಾರೆ. ಬೆಂಗಳೂರಿಗೆ ಮರಳುವುದನ್ನು ಮುಕ್ತವಾಗಿರಿಸಿಕೊಂಡಿರುವ ಮುಖ್ಯಮಂತ್ರಿ ಖಾತೆ ಹಂಚಿಕೆ ಗೊಂದಲ ಹಾಗೂ ಸಂಪುಟ ವಿಸ್ತರಣೆ ಕುರಿತಂತೆ ಸವಿಸ್ತಾರವಾಗಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರದೊಂದಿಗೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪರಮೇಶ್ವರ್ ದೆಹಲಿಗೆ :
ಮುಖ್ಯಮಂತ್ರಿ ಆಗಮಿಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಪರಮೇಶ್ವರ್ ಕೂಡಾ ದೆಹಲಿಗೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಿದ ಅವರು ಕೇಂದ್ರ ಸಚಿವರನ್ನು ಭೇಟಿಯಾಗುವ ಕಾರ್ಯಕ್ರಮವಿದೆ.
ಉಪಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಪರಮೇಶ್ವರ್ ಹೈಕಮಾಂಡ್ ನಾಯಕರಿಗೆ ಧನ್ಯವಾದ ಸಲ್ಲಿಸಲಿದ್ದಾರೆ. ರಾತ್ರಿ ಐಎಎಸ್, ಐಎಫ್ಎಸ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದು, ನಾಳೆ ಬೆಳಿಗ್ಗೆ ಅವರು ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ. ಈ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪ್ರಮಾಣವಚನದ ಸ್ವೀಕಾರದ ನಂತರ ಆಗಿರುವ ಬೆಳವಣಿಗೆಗಳು ಸಂಪುಟ ವಿಸ್ತರಣೆ ಮಾಡುವ ಅನಿವಾರ್ಯತೆ, ಅದರಿಂದ ಎದುರಾಗುವ ಸವಾಲುಗಳ ಕುರಿತಂತೆ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯೂ ಇವೆ ಎನ್ನಲಾಗಿದೆ.
