ಚಂಡೀಗಢ, ಜೂ.11-ಹರಿಯಾಣದ ಹಾಂಸಿ ನಗರದಲ್ಲಿ ಜಿಮ್ ಮಾಲೀಕರೊಬ್ಬರನ್ನು ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಫವ್ವಾರಾ ಚೌಕ್ ಸಮೀಪ ಈ ಘಟನೆ ನಡೆದಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಯುವಕರು ಹಾಗೂ ಯುವತಿಯರ ಗುಂಪಿಗೆ ಹೊರಾಂಗಣ ವ್ಯಾಯಾಮ ತರಬೇತಿ ನೀಡುತ್ತಿದ್ದ ವೇಳೆ ದಾಳಿ ನಡೆದಿದೆ.ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಜಿಮ್ ಮಾಲೀಕರ ಸಮೀಪಕ್ಕೆ ಬಂದು ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಘಟನೆಯಲ್ಲಿ ಮತ್ತೋರ್ವ ವ್ಯಕ್ತಿಗೂ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
