ಬೆಂಗಳೂರು,ಜ.21- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಬಿಜೆಪಿ, ಜೆಡಿಎಸ್ ನಾಯಕರು ಇಂದು ಬೆಳಗ್ಗೆ ಮೊದಲ ಸುತ್ತಿನ ಸಭೆ ನಡೆಸಿ ಸಮಾಲೋಚನೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಬೋಜೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ.ರಂಗನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಸಿದಂತೆ ಚರ್ಚೆ ನಡೆಸಿದರು.
ರಾಮೋತ್ಸವಕ್ಕೆ ರಜೆ ಘೋಷಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪ್ರಥಮ ಹಂತದ ಸಭೆ ನಡೆಸಿದ್ದೇವೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ, ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಮೊದಲ ಹಂತದ ಸಭೆ ನಡೆಸಲಾಗಿದೆ. ಈ ಸಭೆಯ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್‍ಗೆ ಸಂದೇಶ ತಲುಪಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಿಂದಲೇ ಸಂದೇಶವನ್ನು ನೀಡಲಿದ್ದೇವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸಲು ಉಭಯ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ ಎಂದ ಅವರು, ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ ಅದು ತೊಲಗಬೇಕು ಎಂದರು.
ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯುವ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಬೇಕೆಂಬುದು ಜನರ ಭಾವನೆ. ಹೀಗಾಗಿ ರಾಜ್ಯ ಸರ್ಕಾರ ರಜೆ ಘೋಷಿಸಬೇಕು. ಅನೇಕ ರಾಜ್ಯಗಳು ಈಗಾಗಲೇ ರಜೆ ನೀಡಿವೆ ಎಂದರು.