ಬೆಂಗಳೂರು, ಜೂ. 12 ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವಂತೆ ಉದ್ಯಮಿ ಮೋಹನ್ ದಾಸ್ ಪೈ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಕ್ರಮವಾಗಿ ದೇಶಕ್ಕೆ ಬಂದಿರುವ ಬಾಂಗ್ಲಾದೇಶ ಸೇರಿದಂತೆ ಇತರೆ ದೇಶಗಳ ವಲಸಿಗರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರಿರುವ ಸಾಧ್ಯತೆಗಳಿದ್ದು, ಈಗ ಎಸ್‌ಐಆರ್ ನಡೆಸಿದರೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಶುದ್ಧೀಕರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಕೆಲ ಅಕ್ರಮ ವಲಸಿಗರಿಗೆ ಆಧಾರ್ ಸೇರಿದಂತೆ ವಿವಿಧ ದಾಖಲೆಗಳನ್ನು ಒದಗಿಸಿ ಮತದಾರರ ಪಟ್ಟಿಗೆ ಸೇರಿಸುತ್ತಿರುವ ಆರೋಪ ಮಾಡಿರುವ ಅವರು, ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜೂನ್ ಇಲ್ಲವೆ ಜುಲೈ ಅವಧಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಳಿಸಿ, ಆಗಸ್ಟ್‌ನಲ್ಲಿ ಚುನಾವಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ಸರ್ಕಾರ ಹಾಗೂ ಚುನಾವಣಾ ಆಯೋಗ ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಮತದಾರರ ಪಟ್ಟಿಯ ಪಾರದರ್ಶಕತೆಯನ್ನು ಖಚಿತಪಡಿಸಬೇಕು ಎಂದು ಮೋಹನ್ ದಾಸ್ ಪೈ ಹೇಳಿದರು.
