ಬೆಂಗಳೂರು,ಜೂ.17-ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಬಾಡಿಗೆ ಮನೆಗಳಲ್ಲಿ ಹಾಗೂ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರು ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯ,ಕೆ.ಆರ್ಪುರಂ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು ಪೊಲೀಸ್ ಠಾಣಾ ವ್ಯಾಪಿಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಹಾಗೂ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ಖಚಿತ ಮಾಹಿತಿ ಮೇರೆಗೆ ಆ ಸ್ಥಳಗಳ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ದಾಳಿ ಮಾಡಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರನ್ನು ಬಂಧಿಸಿದ್ದಾರೆ.
ಈ ಸಂದರ್ಭದಲ್ಲಿ ಹೊರ ರಾಜ್ಯದ ನಾಲ್ವರು ಮಹಿಳೆಯರು ಹಾಗೂ ಸ್ಥಳೀಯ ಮೂವರು ಸೇರಿದಂತೆ ಏಳು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಆರೋಪಿಗಳನ್ನು ವಿಚಾರಣೆ ಗೊಳಪಡಿಸಿದಾಗ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ಹೇಳಿದ್ದಾರೆ.ಕಾಮಾಕ್ಷಿಪಾಳ್ಯ,ಕೆ.ಆರ್ಪುರಂ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು , ವರ್ತೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
