ಮಂಡ್ಯ, ಜ.28- ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆನಪಿಗಾಗಿ ತಾಲೂಕಿನ ಕೆರಗೋಡು ಗ್ರಾಮದ 108 ಅಡಿ ಎತ್ತರದ ಧ್ವಜಸ್ಥಂಭದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಹನುಮ ಧ್ವಜ ತೆರವುಗೊಳಿಸುವುದರ ವಿರುದ್ಧ ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮಸ್ಥರು ತಮ್ಮ ಗ್ರಾಮದ ಧ್ವಜಸ್ಥಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು.
ಈ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಹನುಮ ಧ್ವಜ ತೆರವುಗೊಳಿಸಲು ಆಗಮಿಸಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದಾರೆ.
ಅಣುಬಾಂಬ್ ಸಾಮರ್ಥ್ಯದಿಂದ ಭಾರತಕ್ಕೆ ಜಾಗತಿಕ ಭೂಪಟದಲ್ಲಿ ಸ್ಥಾನ ಕಲ್ಪಿಸಿದ ಕನ್ನಡಿಗ ರಾಜಾರಾಮಣ್ಣ
ಹನುಮ ಧ್ವಜ ಹಾರಿಸಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಧ್ವಜ ಹಾರಾಟ ಕುರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ವಿವಾದ ಇತ್ಯರ್ಥ ಪಡಿಸಿದ್ದರು ಎನ್ನಲಾಗಿದೆ. ಆದರೂ, ಸರ್ಕಾರಿ ಜಾಗದಲ್ಲಿ ಧ್ವಜಸ್ಥಂಭವಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚರ್ಚೆಗೆ ಗ್ರಾಸವಾದ ಸೂರಜ್-ಶಿವಕುಮಾರ್ ಭೇಟಿ
ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಧ್ವಜಸ್ಥಂಭ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗ್ರಾಮಕ್ಕೆ ಆಗಮಿಸಿದ್ದಾಗ ವಿರೋಧ ವ್ಯಕ್ತವಾಗಿದೆ. ಗ್ರಾಮಸ್ಥರ ಪ್ರತಿಭಟನೆಯಿಂದ ವಾಪಸ್ಸಾಗಿದ್ದ ಅಧಿಕಾರಿಗಳು ಮತ್ತೆ ಬೆಳಗಿನ ಜಾವ ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಯತ್ನಿಸಿದ್ದಾರೆ. ಆಗಪೊಲೀಸರು ಆಗಮಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಘೋಷಣೆ ಕೂಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.