ಬೆಂಗಳೂರು, ಜೂ. 22- ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ.ಶಿವಕುಮಾರ್ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜೊತೆ ಮೊದಲ ಬಾರಿ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನಸಭೆ, ಲೋಕಸಭಾ ಚುನಾವಣೆಗಳಿಗೆ ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದ ಡಿ.ಕೆ.ಶಿವಕುಮಾರ್, ಈಗ ಮುಖ್ಯಮಂತ್ರಿಯಾಗಿ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಭೆ ನಡೆಸಿ ಔಪಚಾರಿಕ ಚರ್ಚೆ ಮಾಡಿದ್ದಾರೆ.
2013 ರಿಂದ 2018ರ ನಡುವೆ ಕಾಂಗ್ರೆಸ್ ಸರ್ಕಾರದ ಜಿಲ್ಲಾಧ್ಯಕ್ಷರುಗಳಿಗೆ ವಾಹನ ವ್ಯವಸ್ಥೆ ಹಾಗೂ ಮಾಸಿಕ ವೇತನ ನೀಡಲಾಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಿ, ಅದರ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತಿದೆ.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕಿದೆ. ಅವುಗಳಲ್ಲಿ ಪಕ್ಷದ ಕೆಳ ಹಂತದ ಕಾರ್ಯಕರ್ತರಿಗೆ ಅವಕಾಶ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ತಮ ಪಕ್ಷದ ಜಿಲ್ಲಾಧ್ಯಕ್ಷರ ಜೊತೆ ಸಮಾಲೋಚನೆ ನಡೆಸಿದ್ದಾರೆ.
24 ತಿಂಗಳ ಅಧಿಕಾರದ ಬಳಿಕ ಡಿ.ಕೆ.ಶಿವಕುಮಾರ್ 2028ಕ್ಕೂ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗುವ ಇರಾದೆಯಲ್ಲಿದ್ದಾರೆ. ಅದಕ್ಕಾಗಿ ಈಗಿನಿಂದಲೇ ತಯಾರಿ ನಡೆಯುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಸಂಘಟನಾತಕ ವಿಷಯಗಳಲ್ಲಿ ನಿರಾಸಕ್ತಿ ತೋರಿಸುತ್ತಿದ್ದಾರೆ. ನೆಪಕಷ್ಟೆ ಪಕ್ಷದ ಅಧ್ಯಕ್ಷರಾಗಿದ್ದು, ಸಂಘಟನಾತಕ ಚಟುವಟಿಕೆ ವಿಚಾರಗಳಲ್ಲಿ ಆಸಕ್ತಿ ತೋರಿಸುತ್ತಿಲ್ಲ ಎಂಬ ಆರೋಪಗಳಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ಬಳಿಕ ಡಿ.ಕೆ.ಶಿವಕುಮಾರ್ ಪಕ್ಷದ ಜಿಲ್ಲಾಧ್ಯಕ್ಷರ ಜೊತೆ ಸಭೆ ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್, ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರ ಈ ಸಭೆ ನಾನಾ ರೀತಿಯ ಚರ್ಚೆಗಳನ್ನು ಹುಟ್ಟುಹಾಕಿವೆ.
ತಾವು ಮುಖ್ಯಮಂತ್ರಿಯಾಗಿದ್ದರೂ, ಪಕ್ಷವನ್ನು ಬಿಡುವುದಿಲ್ಲ, ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಇದ್ದಾರೆ. ಹೀಗಾಗಿ ಇಂದಿನ ಸಭೆ ತೀವ್ರ ಕುತೂಹಲ ಕೆರಳಿಸಿತ್ತು.
