ಬೆಂಗಳೂರು, ಜೂ.25- ನಗರದ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಮುಕ್ತಗೊಳಿಸುವ ಉದ್ದೇಶದಿಂದ ಜುಲೈ 1ರಿಂದ ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ ಆರಂಭಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ದುರಸ್ತಿ ಕಾಮಗಾರಿಗಳ ಕುರಿತು ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳ ಸುಮಾರು 2,000 ಕಿ.ಮೀ ವ್ಯಾಪ್ತಿಯಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿರುವ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲು ವಿಶೇಷ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದರು.
ಅಂಗಡಿ ಮಾಲೀಕರು ತಮ್ಮ ನಾಮಫಲಕ, ವಸ್ತುಗಳು ಹಾಗೂ ಇತರೆ ಸಾಮಗ್ರಿಗಳಿಂದ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿದ್ದರೆ, ಜುಲೈ 1ರವರೆಗೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಬಳಿಕ ಪಾಲಿಕೆಯಿಂದಲೇ ತೆರವುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ನಗರದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ ಸುಮಾರು 1,000 ಮಂದಿ ಸಾವನ್ನಪ್ಪುತ್ತಿದ್ದು, ಅವರಲ್ಲಿ ಶೇ.30ರಷ್ಟು ಪಾದಚಾರಿಗಳೇ ಆಗಿದ್ದಾರೆ. ಸುರಕ್ಷಿತ ಪಾದಚಾರಿ ಮಾರ್ಗಗಳ ನಿರ್ಮಾಣದಿಂದ ಈ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯ ಎಂದು ಸಚಿವರು ಹೇಳಿದರು.
ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆಗೂ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದ್ದು, ನಿಯಮ ಉಲ್ಲಂಘಿಸುವ ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು. ಜೊತೆಗೆ, ಪ್ರಮುಖ ರಸ್ತೆಗಳಲ್ಲಿ ಹಾಗೂ ಪಾದಚಾರಿ ಮಾರ್ಗಗಳ ಮೇಲೆ ತಳ್ಳುಗಾಡಿ ವ್ಯಾಪಾರಕ್ಕೂ ಜುಲೈ 1ರಿಂದ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಗರದ ರಸ್ತೆ ಬದಿಗಳಲ್ಲಿ ವಾರಸುದಾರರಿಲ್ಲದೆ ನಿಂತಿರುವ ವಾಹನಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಜುಲೈ 1ರಿಂದ ಅಂತಹ ವಾಹನಗಳಿಗೆ ನೋಟಿಸ್ ಸ್ಟಿಕ್ಕರ್ ಅಂಟಿಸಲಾಗುವುದು. ಏಳು ದಿನಗಳ ಬಳಿಕವೂ ವಾಹನಗಳನ್ನು ತೆರವುಗೊಳಿಸದಿದ್ದರೆ ಜುಲೈ 10ರಿಂದ ಟೋಯಿಂಗ್ ಮೂಲಕ ತೆರವುಗೊಳಿಸಿ ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.
ನಗರದ ಐದು ಪಾಲಿಕೆಗಳ ವ್ಯಾಪ್ತಿಯ ಪಾದಚಾರಿ ಮಾರ್ಗಗಳ ದುರಸ್ತಿಗಾಗಿ 70 ಕೋಟಿ ಅನುದಾನ ಮೀಸಲಿಡಲಾಗಿದೆ. ಸ್ಲ್ಯಾಬ್, ಕರ್ಬ್ ಸ್ಟೋನ್ ಹಾಗೂ ಲೆವೆಲ್ ಸಮಸ್ಯೆಗಳನ್ನು ತ್ವರಿತವಾಗಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಸ್ತೆ ಗುಂಡಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಬಾಕ್‌್ಸ ಕಟಿಂಗ್ ವಿಧಾನದಲ್ಲಿ ಮುಚ್ಚುವಂತೆ ಹಾಗೂ ಪ್ರಮುಖ ಜಂಕ್ಷನ್‌ಗಳು, ಸಿಗ್ನಲ್‌ಗಳ ಸಮೀಪ ತುರ್ತು ದುರಸ್ತಿ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡದಂತೆ ಸಂಚಾರ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ.ಸಭೆಯಲ್ಲಿ ವಿವಿಧ ಪಾಲಿಕೆಗಳ ಆಯುಕ್ತರು, ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
