ಬೆಂಗಳೂರು,ಜ.31- ಮಾಜಿ ಸಚಿವ ವಿ.ಸೋಮಣ್ಣ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.ಬಿಡದಿ ಬಳಿಯ ತೋಟದ ಮನೆಯಲ್ಲಿ ಇಂದು ಬೆಳಿಗ್ಗೆ ಕುಮಾರಸ್ವಾಮಿಯವರನ್ನು ಸೋಮಣ್ಣ ಭೇಟಿಯಾಗಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಅವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ಕೂಡ ಇರಲಿಲ್ಲ ಎಂದು ಹೇಳಲಾಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಸ್ರ್ಪಸುವ ಉದ್ದೇಶ ಹೊಂದಿರುವ ಸೋಮಣ್ಣ ಅವರು ಇಂದು ಕುಮಾರಸ್ವಾಮಿಯವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಸೋಮಣ್ಣ ಅವರು ಎನ್‍ಡಿಎ ಮೈತ್ರಿಕೂಟ ಸೇರಿರುವ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಲಕ್ನೋದಿಂದ ಪಾದಯಾತ್ರೆ ಮೂಲಕ ಅಯೋಧ್ಯೆ ಬಂದು ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ 350 ಮುಸ್ಲಿಮರು
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ, ಚುನಾವಣಾ ಕಾರ್ಯತಂತ್ರ, ಕ್ಷೇತ್ರ ಹಂಚಿಕೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.ಪ್ರಚಲಿತ ರಾಜಕೀಯ ವಿದ್ಯಮಾನಗಳು ಹಾಗೂ ಜಂಟಿಯಾಗಿ ಹೋರಾಟ ನಡೆಸಿ ಎನ್‍ಡಿಎ ಅಭ್ಯರ್ಥಿಗಳ ಗೆಲುವಿಗೆ ಕೈಗೊಳ್ಳಬೇಕಾದ ತಂತ್ರಗಾರಿಕೆ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರುವುದಾಗಿ ಜೆಡಿಎಸ್ ಘೋಷಿಸಿದ ನಂತರ ಸೋಮಣ್ಣ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಸೋಮಣ್ಣ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದರು.