ಬೆಂಗಳೂರು,ಜ.31- ಸರ್ಕಾರದ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಸಂಪೂರ್ಣ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು. ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.
ಸರ್ಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ನೀಡುವಂತೆ ಸೂಚಿಸಿದರು.
ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕಾರ್ಯದರ್ಶಿ ಹಂತದ ಅಧಿಕಾರಿಗಳ ಅನುಭವ ಎಷ್ಟು ನೆರವಾಗಿದೆ ಎಂದು ಕೇಳಿ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಂಪೂರ್ಣವಾಗಿ ತಲುಪಲು ಆಗದಿರುವ ತಾಂತ್ರಿಕ ಸಮಸ್ಯೆ ಗಳನ್ನು ಏಕೆ ಬಗೆಹರಿಸಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಕೆಲವರು ಅದರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 5 ಮಹತ್ವಾಕಾಂಕ್ಷಿ ಯೋಜನೆಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳ ಅರ್ಜಿ ತಿರಸ್ಕರಿಸುವ ಮುನ್ನ ಸ್ಪಷ್ಟ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
ಸಾರ್ವಜನಿಕರು ಕಂದಾಯ ಇಲಾಖೆ, ತಹಶೀಲ್ದಾರ್ ಮತ್ತು, ಎಸಿ ಮತ್ತು ಡಿಸಿ ಕಚೇರಿಗಳಿಗೆ ಅಲೆದಾಡುವುದನ್ನು ಕಡಿಮೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಕಾರಿಗಳೇ ಖುದ್ದು ಸ್ಪಂದಿಸಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪದೇಪದೇ ಪ್ರಗತಿ ಪರಿಶೀಲನೆ ನಡೆಸಿ, ಎಷ್ಟು ಅರ್ಜಿಗಳು ಬಾಕಿ ಉಳಿದಿವೆ, ಎಷ್ಟು ಬಗೆಹರಿದಿವೆ ಎಂಬ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.
ಕಾರ್ಯದರ್ಶಿ ಹಂತದ ಅಧಿಕಾರಿಗಳು ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಡಯಾಲಿಸಿಸ್ ಕೇಂದ್ರಗಳಲ್ಲಿ ಜನರಿಗೆ ಸಮರ್ಪಕ ಸೇವೆ ಸಿಗುತ್ತಿದೆಯೇ ಎಂದು ಪರಿಶೀಲಿಸಿದ್ದಾರೆಯೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳ ಇತ್ಯರ್ಥಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಸೂಚನೆ ನೀಡಲಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಅರ್ಜಿಗಳ ವಿಲೇವಾರಿ ಸಮಾಧಾನಕರವಾಗಿವೆ. ಇದನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಕಚೇರಿಗಳಿಗೆ, ಹಾಸ್ಟೆಲ್‍ಗಳಿಗೆ, ಪೊಲೀಸ್ ಠಾಣೆಗಳಿಗೆ, ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ. ಕೋಲಾರದ ಹಾಸ್ಟೆಲ್‍ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಏಕೆ ಸೃಷ್ಟಿ ಆಯಿತು? ಅಧಿಕಾರಿಗಳು ಈ ಬಗ್ಗೆ ಏಕೆ ನಿಗಾ ವಹಿಸಲಿಲ್ಲ. ಇಂತಹ ಘಟನೆಗಳು ಮರುಕಳಿಸಿದರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಕುತೂಹಲ ಕೆರಳಿಸಿದ ಕುಮಾರಸ್ವಾಮಿ-ಸೋಮಣ್ಣ ಭೇಟಿ
ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯ ಅಕಾರಿಗಳು- ಫಲಾನುಭವಿಗಳ ಜತೆ ಸತತ ಸಂಪರ್ಕದಲ್ಲಿರಬೇಕು. ಜನ ಸಂಪರ್ಕದ ಇಲಾಖೆಗಳಾದ ಕೃಷಿ, ಕಂದಾಯ, ಪೊಲೀಸ್ ಇಲಾಖೆಗಳ ಮೇಲೆ ನಿಗಾ ವಹಿಸಬೇಕು. ನಿಮ್ಮ ಅವಯಲ್ಲಿ ಆಡಳಿತಾತ್ಮಕವಾಗಿ ಆದ ಬೆಳವಣಿಗೆಗಳ ಬಗ್ಗೆ ಹಾಗೂ ಉತ್ತಮ ಅಭ್ಯಾಸಗಳನ್ನು ಅನುಸರಿಸಿದ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ಧತೆ ಹಾಗೂ ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಯಬೇಕು. ಮುಖ್ಯಕಾರ್ಯದರ್ಶಿಗಳವರೆಗೂ ದೂರುಗಳು ಬಂದರೆ ಸರ್ಕಾರ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.