ಕನಕಪುರ, ಜು.1- ತಾಲ್ಲೂಕಿನ ಕಾವೇರಿ ವನ್ಯಜೀವಿ ವಲಯದ ಅರೆಕೊಪ್ಪ ಗ್ರಾಮದ ಸಮೀಪ ಅರಣ್ಯ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ತಡೆಗೋಡೆ ದಾಟಲು ಯತ್ನಿಸಿದ ವೇಳೆ ಕಾಡಾನೆಯೊಂದು ಬ್ಯಾರಿಕೇಡ್‌ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸುರಕ್ಷಿತವಾಗಿ ಬಿಡಿಸುವ ಕಾರ್ಯಾಚರಣೆ ನಡೆಸಿದರು.ಈ ಘಟನೆ ವನ್ಯಜೀವಿಗಳ ಸುರಕ್ಷತೆ ಕುರಿತು ಮತ್ತೊಮೆ ಆತಂಕ ಮೂಡಿಸಿದ್ದು, ಅರಣ್ಯ ಪ್ರದೇಶಗಳಲ್ಲಿ ಅಳವಡಿಸಲಾಗುತ್ತಿರುವ ಬ್ಯಾರಿಕೇಡ್‌ಗಳ ವಿನ್ಯಾಸದ ಬಗ್ಗೆ ಚರ್ಚೆಗೆ ಕಾರಣವಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ಎಸ್.ಎಸ್ ರೈಲ್ವೆ ಬ್ಯಾರಿಕೇಡ್ ತಡೆಗೋಡೆಗಳ ನಡುವಿನ ಅಂತರವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಿಟ್ಟಿರುವುದೇ ಕಾಡಾನೆ ಸಿಕ್ಕಿಹಾಕಿಕೊಳ್ಳಲು ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.
ಆನೆಗಳು ಆ ಅಂತರದೊಳಗೆ ಸುಲಭವಾಗಿ ಪ್ರವೇಶಿಸಿದರೂ, ಹೊರಬರಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬ್ಯಾರಿಕೇಡ್‌ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ತಡೆಗೋಡೆಗಳ ನಡುವಿನ ಅಂತರವನ್ನು ಮರುಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಮಾಡದಿದ್ದರೆ ಇಂತಹ ಘಟನೆಗಳು ಮುಂದೆಯೂ ಮರುಕಳಿಸುವ ಸಾಧ್ಯತೆ ಇದೆ.
ಆದ್ದರಿಂದ ಸಂಬಂಧಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಬ್ಯಾರಿಕೇಡ್ ವಿನ್ಯಾಸದಲ್ಲಿ ಅಗತ್ಯ ಮಾರ್ಪಾಡುಗಳನ್ನು ಕೈಗೊಳ್ಳಬೇಕು ಎಂದು ಶಿವಕುಮಾರ್ ಎಸ್. ಎಸ್. ಒತ್ತಾಯಿಸಿದ್ದಾರೆ.
ಅಲ್ಲದೆ, ಕಾವೇರಿ ವನ್ಯಜೀವಿ ವಲಯದಲ್ಲಿ ವನ್ಯಜೀವಿಗಳ ಜೀವಕ್ಕೆ ಅಪಾಯವಾಗದ ರೀತಿಯಲ್ಲಿ ಬ್ಯಾರಿಕೇಡ್‌ಗಳನ್ನು ಮರು ವಿನ್ಯಾಸಗೊಳಿಸಬೇಕು. ವನ್ಯಜೀವಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ತಜ್ಞರ ಸಲಹೆಯೊಂದಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಈ ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿ, ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
