Saturday, November 23, 2024
Homeಇದೀಗ ಬಂದ ಸುದ್ದಿಯಡಿಯೂರಪ್ಪನವರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಯಡಿಯೂರಪ್ಪನವರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು,ಸೆ.24- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ನಿಖಿಲ್ ಕುಮಾರಸ್ವಾಮಿ ಅವರು ಸೌಹಾರ್ದಯುತ ಭೇಟಿ ಮಾಡಿದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುತ್ತವೆ. ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿರುವ ಮಾಜಿ ಶಾಸಕರು, ನಾಯಕರು ತೀರ್ಮಾನ ಮಾಡುತ್ತಾರೆ. ಮಂಡ್ಯದಲ್ಲಿ ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ. ಅನೇಕ ನಾಯಕರುಗಳಿದ್ದಾರೆ ಎಂದು ಅವರು ತಿಳಿಸಿದರು.

ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿಯ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕøತಿ. ಹಾಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದಾಗಿ ಅವರು ಹೇಳಿದರು.

ಬಿಜೆಪಿ ಪಕ್ಷವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪಕ್ಷ ಎಂದು ಭಾವಿಸಿದ್ದೇನೆ. ರಾಜ್ಯದ ಬಿಜೆಪಿ ನಾಯಕರನ್ನು ಕಡೆಗಣಿಸುವುದಿಲ್ಲ ಎಂಬ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷ ಮುನ್ನಡೆಸಿದ್ದಾರೆ. ಯುವಕರು ಪಕ್ಷದ ಜವಾಬ್ದಾರಿ ತೆಗೆದುಕೊಂಡು ಇನ್ನಷ್ಟು ಸಂಘಟನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹೊಳೆನರಸೀಪುರದಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ಮುಂಚಿತವಾಗಿ ರಾಜ್ಯಕ್ಕೆ ಮರಳಿದರು. ಆದರೆ, ಮೊದಲ ದಿನದ ಉಭಯ ಪಕ್ಷಗಳ ನಾಯಕರ ಮಾತುಕತೆಯ ಸಂದರ್ಭದಲ್ಲಿ ರೇವಣ್ಣ ಕೂಡ ಇದ್ದರು. ಎಲ್ಲರ ಸಮ್ಮುಖದಲ್ಲೆ ಮೈತ್ರಿಯ ಮುಂದಿನ ತೀರ್ಮಾನಗಳ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿರಲಿದೆ. ನಿನ್ನೆ ಮಂಡ್ಯ ಬಂದ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ರೈತ ಬಂಧುಗಳಿಗೆ ನ್ಯಾಯ ಒದಗಿಸಿ ಕೊಡುವುದರಲ್ಲಿ ನಾವು ಯಾವಾಗಲೂ ಜೊತೆಗಿರುತ್ತೇವೆ ಎಂದು ಅವರು ಹೇಳಿದರು. ಅಲ್ಪಸಂಖ್ಯಾತ ನಾಯಕರು ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

RELATED ARTICLES

Latest News