ಮೈಸೂರು, ಜು.15- ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗೂಳೂರು ಗ್ರಾಮದ ರಸ್ತೆಯಲ್ಲಿ ಮಾನವನ ತಲೆಬುರುಡೆ ಇಟ್ಟು ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಗ್ರಾಮದ ಸಶಾನದಿಂದ ಮಾನವನ ತಲೆಬುರುಡೆ ಮತ್ತು ಮೂಳೆಗಳನ್ನು ತಂದು ರಸ್ತೆಯಲ್ಲಿರಿಸಿ ವಾಮಾಚಾರ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳದಲ್ಲಿ ನಿಂಬೆಹಣ್ಣು, ಅರಿಶಿನ-ಕುಂಕುಮವನ್ನಿಟ್ಟು ಪೂಜೆ ಮಾಡಿರುವ ಕುರುಹುಗಳು ಪತ್ತೆಯಾಗಿದ್ದು, ಮಕ್ಕಳು ಮತ್ತು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಿನ್ನೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಾಮಾಚಾರ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಇದನ್ನು ಗ್ರಾಮದವರು ಯಾರೂ ಮಾಡಿಲ್ಲ, ಬೇರೆ ಊರಿನಿಂದ ಬಂದು ಈ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
